ಬೆಂಗಳೂರು: ನಗರದ ರಾಮಮೂರ್ತಿನಗರದ ಎನ್.ಆರ್.ಐ ಲೇಔಟ್‌ನ ಕಟ್ಟಡವೊಂದರಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯಿಂದ ಉಂಟಾಗಿರುವ ಹಾನಿಯ ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಈ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ, ಘಟನೆಯಲ್ಲಿ ಯಾರಿಗಾದರೂ ಗಾಯಗಳಾಗಿವೆಯೇ ಹಾಗೂ ಆಸ್ತಿ-ಪಾಸ್ತಿಗೆ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



