ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡಿರುವ ದುರ್ಘಟನೆ ನಡೆದಿದೆ.
ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದರ ಪಕ್ಕದಲ್ಲಿದ್ದ ತಾತ್ಕಾಲಿಕ ಗುಡಿಸಲುಗಳಿಗೆ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜ ಪ್ರದೇಶದಲ್ಲಿ ಈ ಅನಾಹುತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಬೆಳಗಿನ ಜಾವ ಸುಮಾರು 1.25ರ ವೇಳೆಗೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿತು.
ಘಟನೆಯ ಮಾಹಿತಿ ತಿಳಿದ ಕೂಡಲೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಆದರೆ ಕಿರಿದಾದ ರಸ್ತೆಗಳ ಕಾರಣದಿಂದಾಗಿ ಅಗ್ನಿಶಾಮಕ ದಳಕ್ಕೆ ಸ್ಥಳ ತಲುಪಲು ಅಡಚಣೆ ಉಂಟಾಯಿತು. ಅಗ್ನಿಶಾಮಕ ಅಧಿಕಾರಿ ಅಜಯ್ ಶರ್ಮಾ ನೇತೃತ್ವದಲ್ಲಿ ದೀರ್ಘಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಆದರೆ, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವಷ್ಟರಲ್ಲಿ ಮೂವರು ಮೃತಪಟ್ಟಿದ್ದರು. ಮೃತರು ಒಂದೇ ಕುಟುಂಬದವರಾಗಿದ್ದು, ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಸ್ಥಳೀಯ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ. ಬೆಂಕಿ ಅವಘಡದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



