ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಹಲವು ದಿನಗಳಿಂದ ಜನರನ್ನು ಬೆಚ್ಚಿಬೀಳಿಸುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಗ್ರಾಮದ ಜಮೀನು ಪ್ರದೇಶದಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿದ್ದ ಕಾರಣ ರೈತರು ಹಾಗೂ ಗ್ರಾಮಸ್ಥರಲ್ಲಿ ಭಾರೀ ಆತಂಕ ಮನೆ ಮಾಡಿತ್ತು.
ಚಿರತೆ ಓಡಾಟ ಹೆಚ್ಚಾಗುತ್ತಿದ್ದಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಅದರಂತೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿ ಬೋನು ಅಳವಡಿಸಿತ್ತು.
ಬೋನಿನೊಳಗೆ ನಾಯಿಯನ್ನು ಇರಿಸಲಾಗಿದ್ದು, ಕಳೆದ ರಾತ್ರಿ ಬೇಟೆಯ ಉದ್ದೇಶದಿಂದ ಬಂದ ಚಿರತೆ ನಾಯಿಯ ಮೇಲೆ ದಾಳಿ ಮಾಡಲು ಯತ್ನಿಸುವಾಗ ಬೋನಿನೊಳಗೆ ಸಿಲುಕಿದೆ. ಬೆಳಗ್ಗೆ ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿ ಚಿರತೆಯನ್ನು ನೋಡಲು ಜಮಾಯಿಸಿದರು.
ಚಿರತೆ ಸೆರೆಗೆ ಸಿಕ್ಕಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದಾರೆ.



