ವಿಜಯಸಾಕ್ಷಿ ಸುದ್ದಿ, ಡಂಬಳ: ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವಲ್ಲ, ವಿದ್ಯಾರ್ಥಿಗಳ ಬದುಕು ರೂಪಿಸುವ ತಪಸ್ಸೆಂದು ಪರಿಗಣಿಸಿ 35 ವರ್ಷಗಳ ಕಾಲ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಮೂಲಕ ಭವಿಷ್ಯದ ದಾರಿ ತೋರಿದ ಜಗದ್ಗುರು ತೋಂಟದಾರ್ಯ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಶಿವರಾಚಯ್ಯ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಭುಜಂಗನಗರದಲ್ಲಿ ಸಿದ್ದರಾಮಯ್ಯ-ನಾಗಮ್ಮ ದಂಪತಿಯ ಪುತ್ರರಾಗಿ ಜನಿಸಿದ ಶಿವರಾಚಯ್ಯ ಅವರು ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ, ಪ್ರೌಢ ಶಿಕ್ಷಣವನ್ನು ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಹಾಗೂ ಡಿಪ್ಲೊಮಾ ಶಿಕ್ಷಣವನ್ನು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು.
1991ರ ಸೆಪ್ಟೆಂಬರ್ 11ರಂದು ಮಾದರ ಚೆನ್ನಯ್ಯ ಐಟಿಐ ಕಾಲೇಜಿನಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಹಿರಿಯ ತರಬೇತುದಾರರಾಗಿ ಸೇವೆ ಸಲ್ಲಿಸಿದರು. ಬಳಿಕ 1997ರ ಆಗಸ್ಟ್ 1ರಂದು ಡಂಬಳದ ಪ್ರತಿಷ್ಠಿತ ಜಗದ್ಗುರು ತೋಂಟದಾರ್ಯ ಐಟಿಐ ಕಾಲೇಜಿನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿ ಸಂಸ್ಥೆಯ ಬೆಳವಣಿಗೆಗೆ ಹೊಸ ಆಯಾಮ ನೀಡಿದರು.
ಅವರ ಆಡಳಿತಾವಧಿಯಲ್ಲಿ ಬೆಂಗಳೂರಿನ ಬಿಡದಿಯ ಪ್ರಸಿದ್ಧ ಟೋಯೊಟಾ ಮೋಟಾರು ಕಾರ್ಪೊರೇಷನ್ ಕಂಪನಿಯೊಂದಿಗೆ ತರಬೇತಿ ಮತ್ತು ಅಪ್ರೆಂಟಿಸ್‌ಶಿಪ್ ಸಂಬಂಧಿತ ಒಡಂಬಡಿಕೆ ಮಾಡಿಕೊಳ್ಳುವ ಅವಕಾಶ ಸಂಸ್ಥೆಗೆ ದೊರೆಯಿತು. ರಾಜ್ಯದ ಕೇವಲ ಐದು ಖಾಸಗಿ ಐಟಿಐ ಸಂಸ್ಥೆಗಳಲ್ಲಿ ಡಂಬಳ ಐಟಿಐ ಸ್ಥಾನ ಪಡೆದಿದ್ದು, ನೂರಾರು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳ ಬಾಗಿಲು ತೆರೆದಿದೆ.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೃಷ್ಟಿಯಿಂದ ವಿವಿಧ ಕಂಪನಿಗಳನ್ನು ಕಾಲೇಜಿಗೆ ಆಹ್ವಾನಿಸಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕುವಂತೆ ಮಾಡಿದರು. ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ದೇಶ-ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಜೆ.ಟಿ.ಮಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಮಾತನಾಡಿ, ಸಂಸ್ಥೆಯ ಅಭಿವೃದ್ಧಿ, ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿ ಹಾಗೂ ಸಿಬ್ಬಂದಿಯೊಂದಿಗೆ ಉತ್ತಮ ಸಮನ್ವಯ ಸಾಧಿಸುವಲ್ಲಿ ಶಿವರಾಚಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.
“ಐಟಿಐ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಭದ್ರ ಅಡಿಪಾಯ. ಶಿಸ್ತು, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಯಶಸ್ಸು ಖಚಿತ.”
ಎಸ್.ಎಂ. ಶಿವರಾಚಯ್ಯ
ನಿವೃತ್ತ ಪ್ರಾಚಾರ್ಯರು
“ಶಿಕ್ಷಣವೆಂದರೆ ಕೇವಲ ಜ್ಞಾನ ನೀಡುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಮಹತ್ತರ ಕಾರ್ಯ. ಶಿವರಾಚಯ್ಯ ಅವರು ಶಿಸ್ತು, ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ.”
ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು



