ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯಲಿರುವ ದತ್ತ ಜಯಂತಿ ಆಚರಣೆ ಹಿನ್ನೆಲೆಯಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ. ಹಿಂದೂ ಸಂಘಟನೆಗಳು ಡಿಸೆಂಬರ್ 2ರಿಂದ ಮೂರು ದಿನಗಳ ಕಾಲ ದತ್ತ ಜಯಂತಿಯನ್ನು ಆಚರಿಸಲು ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಮುಖ್ಯ ನಿರ್ಬಂಧಗಳು:
-
ಡಿಸೆಂಬರ್ 3ರಂದು ಬೃಹತ್ ಶೋಭಾಯಾತ್ರೆ ಇರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ.
-
ಡಿಸೆಂಬರ್ 4ರಂದು ದತ್ತ ಪಾದುಕೆ ದರ್ಶನದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಬಂದ್ ಘೋಷಿಸಲಾಗಿದ್ದು, ಅಂಗಡಿ-ಮಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.
-
ಇಂದಿನಿಂದ ಡಿಸೆಂಬರ್ 5ರ ಬೆಳಿಗ್ಗೆ 10 ಗಂಟೆಯವರೆಗೆ ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಮತ್ತು ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲಾ ಪೊಲೀಸ್ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಶಾಂತಿ-ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.



