ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಮೈ–ಬೆಂ ದಶಪಥ ಹೆದ್ದಾರಿಯ ಟೋಲ್ ಪ್ಲಾಜಾದಲ್ಲಿ ಟೋಲ್ ಸಿಬ್ಬಂದಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಟೋಲ್ ಶುಲ್ಕದ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಟೋಲ್ ಸಿಬ್ಬಂದಿಗಳು ರೌಡಿಗಳನ್ನು ಕರೆಸಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಟೋಲ್ ಸಿಬ್ಬಂದಿಗಳೇ ಹೊರಗಿನ ರೌಡಿಗಳನ್ನು ಕರೆಸಿ ದೌರ್ಜನ್ಯ ಎಸಗಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೇಳೆ ಪ್ರಯಾಣಿಕರನ್ನು ದರೋಡೆ ಮಾಡುವ ಉದ್ದೇಶದಿಂದ ಚಿನ್ನದ ಸರ ಕದಿಯಲು ಕೂಡ ಪ್ರಯತ್ನಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
ಘಟನೆ ಕುರಿತು ದೂರು ನೀಡಲು ಹಲ್ಲೆಗೊಳಗಾದವರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದರೂ, ಪೊಲೀಸರು ಪ್ರಕರಣ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪವೂ ಹೊರಬಂದಿದೆ.
ಪ್ರಕರಣ ದಾಖಲಿಸದ ಪೊಲೀಸರ ನಡೆ ಖಂಡಿಸಿ, ಹಲ್ಲೆಗೊಳಗಾದವರು ಹಾಗೂ ಗ್ರಾಮಸ್ಥರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದರು. ಈ ವೇಳೆ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ ಟೋಲ್ ಸಿಬ್ಬಂದಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.



