ಚಿಕ್ಕಮಗಳೂರು: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಸರ್ವೇಯರ್‌ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಗಳು. ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಇಂದಾವರ ಗ್ರಾಮದ ಧರಣೇಶ್ ಎಂಬವರು ತಮ್ಮ ಕೃಷಿ ಜಮೀನಿನ ಸರ್ವೇಗಾಗಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಸರ್ವೇ ಹಾಗೂ ಸ್ಕೆಚ್ ತಯಾರಿಸಲು ₹10 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹2 ಲಕ್ಷ ನೀಡುವಂತೆ ಸೂಚಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಧರಣೇಶ್ ಅವರು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಖಾಸಗಿ ಕಚೇರಿಯಲ್ಲಿ ₹2 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳನ್ನು ಬಲೆಗೆ ಬೀಳಿಸಿದ್ದಾರೆ.
ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.



