ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮಿನ ಕಟ್ಟಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ.
ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಬುಧವಾರ ಮಧ್ಯಾಹ್ನ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನ ಮೇಲ್ಛಾವಣಿ ಮತ್ತು ಕಟ್ಟಡದ ಪ್ರಮುಖ ಭಾಗ ಏಕಾಏಕಿ ಕುಸಿದ ಪರಿಣಾಮ, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಕಬ್ಬಿಣ ಹಾಗೂ ಸಿಮೆಂಟ್ ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ಬಳಿಕ ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡ ಹಾಗೂ ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆದಲು ಕ್ರೇನ್‌ಗಳು, ಗ್ಯಾಸ್ ಕಟರ್‌ಗಳು ಹಾಗೂ ವಿಶೇಷ ರಕ್ಷಣಾ ಉಪಕರಣಗಳನ್ನು ಬಳಸಲಾಗುತ್ತಿದೆ. ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ಪ್ರಕಾರ, ಇದುವರೆಗೆ 21 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇನ್ನೂ 12ರಿಂದ 18 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಕಟ್ಟಡ ಕುಸಿತಕ್ಕೆ ಕಾರಣವೇನು ಎಂಬ ಕುರಿತು ತನಿಖೆ ಆರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



