ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಶಿಸ್ತು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಅವರನ್ನು ಬಿಜೆಪಿ ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ.
ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಮಾಹಿತಿಯ ಪ್ರಕಾರ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಪದೇಪದೇ ಮಾಧ್ಯಮಗಳ ಮುಂದೆ ಪಕ್ಷ ಹಾಗೂ ನಾಯಕರ ವಿರುದ್ಧ ಹೇಳಿಕೆ ನೀಡಿದ್ದರಿಂದ ಪಕ್ಷದ ಒಳಗೆ ಅಸಮಾಧಾನ ಹೆಚ್ಚಾಗಿತ್ತು.
ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಸಂಪರ್ಕದಲ್ಲಿದ್ದರು ಎಂಬುದೂ ಗಮನ ಸೆಳೆದಿತ್ತು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಬಳಿಕ ಪಕ್ಷವು ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ನೀಡಿದ ಉತ್ತರ ತೃಪ್ತಿಕರವಾಗಿಲ್ಲ ಎಂದು ಹೇಳಿ, ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.



