ಮಡಿಕೇರಿ: ರಾಜ್ಯದಲ್ಲಿ ಬಿಸಿಲಿನ ತಾಪ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ.
ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟಿನಲ್ಲಿ ಈ ಬಾರಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜಲಕ್ಷಾಮದ ಆತಂಕ ಎದುರಾಗಿದೆ.
ಒಟ್ಟು 8.5 ಟಿಎಂಸಿ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯದಲ್ಲಿ ಪ್ರಸ್ತುತ ಕೇವಲ 2 ಟಿಎಂಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ ಒಂದು ಟಿಎಂಸಿ ನೀರು ಕುಡಿಯಲು ಯೋಗ್ಯವಾಗಿದ್ದು, ಉಳಿದ ಒಂದು ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ ಎಂದು ತಿಳಿದುಬಂದಿದೆ.
ಸಾಮಾನ್ಯವಾಗಿ ತಂಪಾದ ವಾತಾವರಣಕ್ಕಾಗಿ ಪ್ರಸಿದ್ಧವಾಗಿರುವ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಾಗಿ, ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಹಾರಂಗಿ ಜಲಾಶಯವನ್ನು ಅವಲಂಬಿಸಿರುವ ಹತ್ತಾರು ಹಳ್ಳಿಗಳ ಜನರು ಮುಂದಿನ ದಿನಗಳಲ್ಲಿ ನೀರಿನ ಕೊರತೆಯನ್ನು ಎದುರಿಸುವ ಭೀತಿಯಲ್ಲಿ ಇದ್ದಾರೆ.
ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ಸಮಸ್ಯೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಸೋಮವಾರಪೇಟೆ ತಾಲೂಕಿನ ಜನರು ಹಾಗೂ ಮೈಸೂರು, ಹಾಸನ ಭಾಗದ ರೈತರು ಜಲಕ್ಷಾಮಕ್ಕೆ ತುತ್ತಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಒಟ್ಟಿನಲ್ಲಿ ಮುಂದಿನ ಎರಡು ತಿಂಗಳುಗಳ ಕಾಲ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಲಾಶಯದಲ್ಲಿರುವ ನೀರನ್ನು ಸಂರಕ್ಷಿಸುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಸಮಸ್ಯೆ ಗಂಭೀರವಾಗುವ ಸಾಧ್ಯತೆ ಇದೆ.



