ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೋವನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಡೆಯರ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಣದೆ ಹಲವು ವರ್ಷಗಳು ಕಳೆದಿದ್ದು, ಗ್ರಾಮಸ್ಥರು ಇನ್ನೂ ಮೂಲಸೌಕರ್ಯದ ನಿರೀಕ್ಷೆಯಲ್ಲಿದ್ದಾರೆ. ತಗ್ಗು-ಗುಂಡಿಗಳಿಂದ ಕೂಡಿರುವ ರಸ್ತೆ ಹಾಗೂ ಎರಡೂ ಬದಿಗಳಲ್ಲಿ ಆವರಿಸಿರುವ ಜಾಲಿ ಕಂಟೆಗಳು ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದು, ರಸ್ತೆ ದುರಸ್ತಿ ಮತ್ತು ಅಭಿವೃದ್ಧಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸವಣೂರ ರಸ್ತೆಯಲ್ಲಿರುವ ಅಗಡಿ ಇಂಜಿನಿಯರಿಂಗ್ ಕಾಲೇಜು ಸಮೀಪದಿಂದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮೂಲಕ ಒಡೆಯರ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು ಎರಡು ಕಿಲೋಮೀಟರ್ ರಸ್ತೆ ಹಲವು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ರಸ್ತೆಯಲ್ಲಿನ ತಗ್ಗು-ಗುಂಡಿಗಳಿಂದ ವಾಹನ ಸವಾರರು ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದು, ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ದುಸ್ತರವಾಗುತ್ತಿದೆ.
ರಸ್ತೆಯ ಎರಡೂ ಬದಿಗಳಲ್ಲಿ ಜಾಲಿ ಕಂಟೆಗಳು ಬೆಳೆದು ರಸ್ತೆಯನ್ನು ಆವರಿಸಿಕೊಂಡಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರು ಸಂಚಾರ ನಡೆಸಲು ಹರಸಾಹಸ ಪಡುತ್ತಿದ್ದಾರೆ. ಗ್ರಾಮಕ್ಕೆ ಸಮರ್ಪಕ ಬಸ್ ಸೌಲಭ್ಯವೂ ಇಲ್ಲದಿರುವುದರಿಂದ ಜನರು ಬೈಕ್, ಇತರೆ ಖಾಸಗಿ ವಾಹನಗಳು ಹಾಗೂ ಕಾಲ್ನಡಿಗೆಯ ಮೂಲಕವೇ ಗ್ರಾಮ ತಲುಪುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.
ರಸ್ತೆ ನಿರ್ಮಾಣ ಮತ್ತು ದುರಸ್ತಿ ಕುರಿತು ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಯ ಮಾತುಗಳು ಕೇಳಿಬರುತ್ತಿದ್ದರೂ ರಸ್ತೆ ಕಾಮಗಾರಿ ಮಾತ್ರ ಕಾಗದದಲ್ಲೇ ಉಳಿದಿದೆ ಎಂಬ ಆರೋಪ ಕೇಳಿಬರುತ್ತಿದೆ.
ಗ್ರಾಮಸ್ಥರ ಪ್ರಕಾರ, ರಸ್ತೆ ಹದಗೆಟ್ಟಿರುವುದರಿಂದ ಪ್ರತಿದಿನ ಅಪಘಾತ ಸಂಭವಿಸುವ ಭೀತಿ ಕಾಡುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ವೃದ್ಧರಿಗೆ ಸಂಚಾರ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಸಂಬಂಧಿತ ಇಲಾಖೆ ಹಾಗೂ ಜನಪ್ರತಿನಿಧಿಗಳು ತಕ್ಷಣ ರಸ್ತೆ ಅಭಿವೃದ್ಧಿಗೆ ಮುಂದಾಗಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
“ಬಹಳ ವರ್ಷಗಳಿಂದ ಈ ರಸ್ತೆ ದುರಸ್ತಿ ಕಂಡಿಲ್ಲ. ರಸ್ತೆಯ ಎರಡೂ ಬದಿಗಳಲ್ಲಿ ಜಾಲಿ ಕಂಟೆಗಳು ಆವರಿಸಿವೆ. ದಿನನಿತ್ಯ ಅಪಘಾತ ಸಂಭವಿಸುವ ಆತಂಕವಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶೀಘ್ರವೇ ರಸ್ತೆ ನಿರ್ಮಾಣ ಮತ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕು.”
– ಪದ್ಮರಾಜ ಪಾಟೀಲ, ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ



