ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವಶದಲ್ಲಿದ್ದ ಯುವಕ ಮೃತಪಟ್ಟಿರುವ ಘಟನೆ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ಎಫ್ಐಆರ್ ದಾಖಲಿಸಲಾಗಿದೆ.
ಪಟ್ಟಣದ ಮೆಹಬೂಬನಗರ ನಿವಾಸಿ ಖಲೀಲುಲ್ಲಾ (38) ಎಂಬಾತ ಶನಿವಾರ ರಾತ್ರಿ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತ್ನಿ 112 (ERSS)ಗೆ ನೀಡಿದ ದೂರಿನ ಮೇರೆಗೆ ಪೊಲೀಸರು ಠಾಣೆಗೆ ಕರೆತಂದಿದ್ದರು. ಈ ವೇಳೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ ಪರಿಣಾಮ ಖಲೀಲುಲ್ಲಾ ಮೃತಪಟ್ಟಿದ್ದಾರೆ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.
ಠಾಣೆಯಲ್ಲಿ ಅಸ್ವಸ್ಥಗೊಂಡ ಖಲೀಲುಲ್ಲಾ ಅವರನ್ನು ಪೊಲೀಸರು ಮುಂಜಾನೆ ಸುಮಾರು 3 ಗಂಟೆ ವೇಳೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾನ್ಹವಿ ಅವರು ಠಾಣೆಯ ಮುಖ್ಯ ಪೇದೆ ರಾಘವೇಂದ್ರ ಹಾಗೂ ಪೇದೆ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನೂ ಅಮಾನತುಗೊಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಡಿಎಸ್ಪಿಗೆ ವಹಿಸಲಾಗಿದ್ದು, ಠಾಣೆಯ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ತಜ್ಞರ ತಂಡದಿಂದ ಪರಿಶೀಲಿಸಲಾಗುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಶಾಸಕ ಕೆ. ನೇಮಿರಾಜ ನಾಯ್ಕ ಆಸ್ಪತ್ರೆಗೆ ಹಾಗೂ ಠಾಣೆಗೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಹರಪನಹಳ್ಳಿ ಅಂಜುಮನ್ ಸಮಿತಿಯ ನೂರ್ ಮಹಮ್ಮದ್ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕೂಡ ಕುಟುಂಬಕ್ಕೆ ಧೈರ್ಯ ತುಂಬಿದರು.
ಇನ್ನೊಂದೆಡೆ, ಬಳ್ಳಾರಿ ವಲಯ ಐಜಿಪಿ ಡಾ. ಹರ್ಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಎಸ್ಆರ್ಪಿ, ಡಿಎಆರ್ ಸೇರಿದಂತೆ ವಿವಿಧ ಠಾಣೆಗಳ ಸುಮಾರು 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾನ್ಹವಿ ಅವರು ಭಾನುವಾರ ಹಾಗೂ ಸೋಮವಾರವೂ ಠಾಣೆಯಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದರು.
“ಘಟನೆಗೆ ಸಂಬಂಧಿಸಿದಂತೆ ಮುಖ್ಯ ಪೇದೆ ರಾಘವೇಂದ್ರ ಹಾಗೂ ಪೇದೆ ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ಅಮಾನತುಗೊಳಿಸಲಾಗಿದೆ. ಡಿಎಸ್ಪಿ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.”
– ಎಸ್. ಜಾನ್ಹವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯನಗರ



