ವಿಜಯಸಾಕ್ಷಿ ಸುದ್ದಿ, ತುಮಕೂರು
ಸಾಮಾಜಿಕ, ಆರ್ಥಿಕವಾಗಿ ಅಲ್ಪಸಂಖ್ಯಾತರು ಸದೃಢರಾಗಲು ಶಿಕ್ಷಣ, ಮೂಲಭೂತ ಸೌಕರ್ಯ, ಆಶ್ರಯ ಯೋಜನೆಗಳಡಿಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮುಸ್ಲಿಂ, ಸಿಖ್, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳನ್ನು ಒಳಗೊಂಡ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ದಿಗೆ ಹಿಂದಿನ ಸರ್ಕಾರ 3000 ಕೋಟಿ ರೂ. ಅನುದಾನ ನೀಡಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ 800 ಕೋಟಿ ರೂ.ಗಳಿಗೆ ಇಳಿಸಲಾಗಿದೆ. ಇದರಿಂದ ಶೇ.15 ಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯದ ಅಭಿವೃದ್ದಿ ಕಷ್ಟಸಾಧ್ಯ.
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅರಿವು ಯೋಜನೆಯಡಿಯಲ್ಲಿ ನೀಡುತ್ತಿದ್ದ ಒಟ್ಟು 292 ಕೋಟಿ ರೂ. ಬದಲಾಗಿ ಒಟ್ಟು 71 ಕೋಟಿಗೆ ಕಡಿತ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಇನ್ನೂ 30 ಕೋಟಿ ರೂ. ಹಣ ಬಾಕಿ ಇದ್ದು, ಸರ್ಕಾರ ಸಮುದಾಯವನ್ನು ಶೈಕ್ಷಣಿಕವಾಗಿ ಹಿಂದಕ್ಕೆ ತಳ್ಳುವ ಪ್ರಯತ್ನ ನಡೆಸುತ್ತಿದೆ.
ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಮುಸ್ಲಿಂ ಸಮುದಾಯದ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯಗಳಿಗಾಗಿ ನೀಡುತ್ತಿದ್ದ
ಅನುದಾನವನ್ನೂ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಬಿದಾಯಿ ಯೋಜನೆ ಪುನಃ ಜಾರಿಗೆ ತರಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ವಕ್ಫ್ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಬೇಕು. ವಕ್ಪ್ ಆಸ್ತಿಗಳ ಸರ್ವೇ ಮತ್ತು ಗಣಕೀಕರಣ, ಖಬರ್‌ಸ್ತಾನ್‌ಗಳಿಗೆ ಜಾಗ ಮೀಸಲು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿವೃತ್ತ ಜಿಲ್ಲಾಧಿಕಾರಿ ಎಂ.ಮೆಹಬೂಬ್ ಪಾಷಾ, ಜಿಲ್ಲಾ ವಕ್ಪ್ ನಿವೃತ್ತ ಅಧಿಕಾರಿ ಮೊಹಮ್ಮದ್ ಆಸಿಫ್‌ವುಲ್ಲಾ, ತೆಹರಿಕ್-ಎ-ಉರ್ದು ಅದಬ್‌ನ ಸದಸ್ಯ ಮುಷ್ಕೂರ್ ಅಹಮದ್‌ಖಾನ್ ಸೇರಿದಂತೆ ಅನೇಕರು ಇದ್ದರು.