ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ;
ಪಶ್ಚಿಮ ಪದವೀಧರರ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನಗಳ ಜೊತೆಗೆ ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪಶ್ಚಿಮ ಪದವೀಧರರ ಚುನಾವಣೆ-2020 ರ ವಿವಿಧ ಸಮಿತಿಗಳ ಮುಖ್ಯಸ್ಥರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಐದಕ್ಕಿಂತ ಹೆಚ್ಚು ಜನರು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳದಂತೆ ಕ್ರಮ ವಹಿಸಿಬೇಕು. ಹೆಚ್ಚಿನ ಜನರು ಒಂದೆಡೆ ಸೇರಲು ಅವಕಾಶ ಇಲ್ಲದಿರುವುದರಿಂದ ಚುನಾವಣಾ ಆಯೋಗದ ನಿರ್ದೇಶನ ಮತ್ತು ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಚುನಾವಣಾ ಕೆಲಸ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಸ್ವೀಪ್ ಸಮಿತಿ ಮತದಾರರಲ್ಲಿ ಕೊವಿಡ್ ತಡೆಗಟ್ಟುವುದರೊಂದಿಗೆ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಭಾಗವಹಿಸುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶಿಸಿದರು.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ವಿಚಾರ ಪ್ರಕಟಿಸಬೇಕಿದ್ದಲ್ಲಿ ಜಿಲ್ಲಾಡಳಿತದ ಅನುಮತಿ ಕಡ್ಡಾಯವಾಗಿದೆ. ಪೂರ್ವಾನುಮತಿ ಇಲ್ಲದೇ ಪ್ರಕಟಿಸಿದಲ್ಲಿ ಸೂಕ್ತ ಕ್ರಮ ವಹಿಸಿಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಿಇಒ ಡಾ.ಆನಂದ ಕೆ. ಮಾತನಾಡಿ, ಚುನವಣಾ ಕರ್ತವ್ಯದ ಸಂದರ್ಭದಲ್ಲಿ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕಲ್ಲದೇ, ಇನ್ನುಳಿದ ಚುನಾವಣೆಗಳಂತೆ ಪದವೀಧರ ಕ್ಷೇತ್ರಗಳ ಚುನಾವಣೆಗಳು ಅಷ್ಟೇ ಮಹತ್ವದ್ದಾಗಿವೆ. ಜಿಲ್ಲೆಯ ಎಲ್ಲ ತಹಸೀಲ್ದಾರರು ತಮ್ಮ ವ್ಯಾಪ್ತಿಯ ಪ್ರಿಂಟರ‍್ಸ್ ಮಾಲೀಕರ ಸಭೆ ಕರೆದು ಚುನಾವಣೆಗೆ ಸಂಬಂಧಿಸಿದ ಕರಪತ್ರ/ಭಿತ್ತಿಪತ್ರ, ಬ್ಯಾನರ‍್ಸ್ ಮುದ್ರಣಕ್ಕೂ ಮುನ್ನ ಅವುಗಳ ಪ್ರತಿಗಳನ್ನು ನೀಡುವಂತೆ ಸೂಚಿಸಬೇಕು. ದೇವಸ್ಥಾನಗಳಲ್ಲಿ ಚುನಾವಣಾ ಸಭೆ ಸೇರದಂತೆ ಕ್ರಮ ಕೈಗೊಳ್ಳಬೇಕು. ವಿಡಿಯೋ ವಿಚಕ್ಷಣಾ ದಳ ಸಭೆ ನಡೆಯುವ ಸ್ಥಳಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಸೂಚಿಸಿದರು.
ಎಸ್ಪಿ ಯತೀಶ್ ಎನ್. ಮಾತನಾಡಿ, ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧದ ದೂರಿನಲ್ಲಿ ಸ್ಪಷ್ಟತೆ ಇರಬೇಕು. ಅಭ್ಯರ್ಥಿಗಳು 50,000 ರೂ.ಕ್ಕಿಂತ ಹೆಚ್ಚು ಹಣ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದು ಕಂಡು ಬಂದರೆ ಹಣ ಜಪ್ತಿ ಮಾಡಲಾಗುವುದು ಎಂದರು. ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ತರಬೇತಿಯಲ್ಲಿ ಇದ್ದರು.