ಗ್ರಾ.ಪಂ. ಚುನಾವಣೆ; ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊದಲ ಹಂತದ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲ್ಲೂಕುಗಳಲ್ಲಿ ಡಿ.22 ಮತ್ತು ಎರಡನೇ ಹಂತದ ನರಗುಂದ, ರೋಣ, ಗಜೇಂದ್ರಗಡ, ಮುಂಡರಗಿ ತಾಲೂಕುಗಳಲ್ಲಿ 27ರಂದು ಚುನಾವಣೆ ನಡೆಯಲಿವೆ.

ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮೊದಲನೇ ಹಂತದ ಗ್ರಾ.ಪಂ.ವ್ಯಾಪ್ತಿಯಲ್ಲಿ ಡಿ.20 ರ ಸಂಜೆ 5 ಗಂಟೆಯಿಂದ ಡಿ.22 ರ ಮಧ್ಯರಾತ್ರಿಯವರೆಗೆ ಹಾಗೂ ಎರಡನೇ ಹಂತದ ಗ್ರಾ.ಪಂ.ವ್ಯಾಪ್ತಿಯಲ್ಲಿ ಡಿ.25 ರ ಸಂಜೆ 5 ಗಂಟೆಯಿಂದ ಪ್ರಾರಂಭಿಸಿ ಡಿಸೆಂಬರ್ 27 ರ ಮಧ್ಯರಾತ್ರಿಯವರೆಗೆ ಕೆಳಕಂಡ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶಿಸಿದ್ದಾರೆ.

ಜಿಲ್ಲೆಯ ಚುನಾವಣೆ ಜರುಗುವ ಗ್ರಾ.ಪಂ. ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿಗಳು/ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು ಅದರಲ್ಲಿ 5 ಜನರಿಗಿಂತ ಹೆಚ್ಚು ಜನರು ಸೇರತಕ್ಕದ್ದಲ್ಲ. ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಆ ಪ್ರದೇಶದಲ್ಲಿನ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಫೋಟೋ ಕಾಪಿಯರ್ ಬಂದ್ ಮಾಡಲು ಆದೇಶಿಸಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣಾ ಪ್ರಚಾರ ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಬೇಕು. ಮತಗಟ್ಟೆಗಳ ಸುತ್ತ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್ , ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಡಿಸಿ ಎಂ ಸುಂದರೇಶ್ ಬಾಬು

ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್, ವಾಹನಗಳ ಬಳಕೆ ಮತ್ತು ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here