ವಿಜಯಸಾಕ್ಷಿ ಸುದ್ದಿ, ಗದಗ:
ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾನುವಾರ ಹಾಗೂ ಸೋಮವಾರ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದರು.
ಆದರೆ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಮಾಂಸಾಹಾರಿ ಹೋಟೆಲ್ ಸೇರಿದಂತೆ ಎರಡು ಕಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲೆಯ ರೋಣ ಪಟ್ಟಣದ ಲೋಕೋಪಯೋಗಿ ಇಲಾಖೆಯ ಕಛೇರಿ ಬಳಿ ಮದ್ಯ ಮಾರಾಟ ಮಾಡುತ್ತಿದ್ದ ಕರೀಮ್ ಖಾಸಿಮಸಾಬ್ ಪಠಾಣ್ ಎಂಬಾತನನ್ನು ಬಂಧಿಸಿ ಆತನಿಂದ 7 ನೂರು ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗದಗನ ಧೋಬಿ ಘಾಟ್ ಬಳಿಯ ರಿಂಗ್ ರೋಡ್ ನಲ್ಲಿ ಸಾವಜಿ ಕಿಚನ್ ಹೋಟೆಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶಹರ ಠಾಣೆಯ ಪಿಎಸ್ಐ ಜಿ ಟಿ ಜಕ್ಕಲಿ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿ ನಾರಾಯಣ ಹನಮಂತಸಾ ಕಾಟವಾ ಎಂಬಾತನನ್ನು ವಶಕ್ಕೆ ಪಡೆದು, 422 ರೂ.ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.