ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪ್ರಯತ್ನ ನಡೆಸಿವೆ. ಎರಡೂ ಪಕ್ಷಗಳ ನಾಯಕರು ಮೇಲಿಂದ ಮೇಲೆ ಸಭೆ ಏರ್ಪಡಿಸಿ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತಿವೆ. ಈ ನಿಟ್ಟಿನಲ್ಲಿ ಬಿಜೆಪಿ ನಗರದ ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಚುನಾವಣಾ ಪೂರ್ವಭಾವಿ ಸಭೆ ನಡೆಸಿತು.
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಡಿ.7 ರಿಂದ ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಪ್ರಾರಂಭವಾಗಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರಲಿದ್ದು, ಪ್ರಚಾರದ ಭರಾಟೆ ಶುರುವಾಗಲಿದೆ.
ಪಕ್ಷದ ಚಿಹ್ನೆಯಲ್ಲಿ ಚುನಾವಣೆ ನಡೆಯದಿದ್ದರೂ, ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿ ಭವಿಷ್ಯದ ಮುಂದಿನ ನಾಯಕರನ್ನಾಗಿಸಲು ರಾಜಕೀಯ ಪಕ್ಷಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಈ ಮೂಲಕ ತಳಮಟ್ಟದಲ್ಲಿ ಪಕ್ಷ ಸಂಘಟಿಸಿ ಬಲಪಡಿಸಲು ಯತ್ನಸುತ್ತಿವೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದರೆ, ಮುಂದಿನ ವರ್ಷ ನಡೆಯುವ ತಾಲ್ಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಸುಲಭವಾಗಿ ಜಯಭೇರಿ ಬಾರಿಸಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಇದರಿಂದಾಗಿ ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸಲೀಸಾಗಿ ಗೆಲ್ಲಬಹುದು ಎಂಬ ಚಿಂತನೆಯಲ್ಲಿದ್ದಾರೆ.
ಬಾಜಪ ಮುಖಂಡರು ಗ್ರಾ.ಪಂ.ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ಜಿಲ್ಲೆಯಲ್ಲಿ ಪಾರುಪತ್ಯ ಮೆರೆಯಲು ಹವಣಿಸುತ್ತಿದ್ದಾರೆ. ಇದಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದೆ.
ಇದರ ಭಾಗವಾಗಿ ಜಿಲ್ಲಾ ಬಿಜೆಪಿ ನಗರದ ಡಿಸಿ ಕಚೇರಿ ಮುಂದಿರುವ ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಗದಗ ವಿಧಾನಸಭಾ ಕ್ಷೇತ್ರದ ಗ್ರಾ.ಪಂ.ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ ಹಾಗೂ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ನೇತೃತ್ವದಲ್ಲಿ ಸಭೆ ಜರುಗಿತು. ಇದರಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ವಿವಿಧ ಬಿಜೆಪಿ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಸಭೆಯಲ್ಲಿ ಚುನಾವಣಾ ಗೆಲುವಿಗಾಗಿ ರಣತಂತ್ರ ರೂಪಿಸಿದ್ದು, ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ, ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು. ಚುನಾವಣೆ ಹೊತ್ತಿನಲ್ಲಿ ಗ್ರಾಮೀಣ ಭಾಗದಲ್ಲಾಗುತ್ತಿರುವ ಸ್ಥಳೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಅಲ್ಲದೇ, ಗೆಲುವಿಗಾಗಿ ಯಾವೆಲ್ಲಾ ತಂತ್ರ ರೂಪಿಸಬಹುದು ಎಂಬುದರ ಬಗ್ಗೆ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.
ಮತ್ತೊಂದೆಡೆ ಕಾಂಗ್ರೆಸ್ ಕೂಡಾ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣ ತೊಟ್ಟಿದೆ. ಮೊನ್ನೆಯಷ್ಟೇ ಶಾಸಕ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿತ್ತು. ಅಲ್ಲದೇ, ಗ್ರಾ.ಪಂ.ಚುನಾವಣೆಯ ಜವಾಬ್ದಾರಿಯನ್ನು ಮಾಜಿ ಶಾಸಕ ಡಿ.ಆರ್.ಪಾಟೀಲ್ ಅವರಿಗೆ ವಹಿಸಲಾಗಿದೆ ಎಂದು ಹೇಳಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಚುನಾವಣಾ ಚಟುವಟಿಕೆಗಳು ಬಲು ಜೋರಾಗಿದ್ದು, ಗೆಲುವಿನ ಕುದುರೆ ಯಾರಾಗುತ್ತಾರೆ ಎಂಬುದನ್ನ ಕಾದು ನೋಡಬೇಕು.