ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಹೊಸದಾಗಿ ಗದಗ, ಗಜೇಂದ್ರಗಡ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಣೆ ಆಗಿದ್ದು, ಈ ಮೂಲಕ ಗದಗ ಪ್ರವಾಹ ಪೀಡಿತ ಜಿಲ್ಲೆಯಾಗಿದೆ. ಹೀಗಾಗಿ ಸರ್ಕಾರದ ಮಾರ್ಗದರ್ಶನದನ್ವಯ ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಯ ಪ್ರಮಾಣವನ್ನು ಸಮೀಕ್ಷೆ ಮಾಡಿ, ಅರ್ಹ ಫಲಾನುಭವಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ತಾಲೂಕಾಧಿಕಾರಗಳ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹೊಸದಾಗಿ ಘೋಷಣೆ ಆಗಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ಸೇರಿದಂತೆ ಪ್ರವಾಹಕ್ಕೆ ಹಾನಿಗೊಳಗಾಗಿರುವ ಮನೆಗಳ ಸಮೀಕ್ಷಾ ಕಾರ್ಯ ಕೈಗೊಳ್ಳಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್‌ನಲ್ಲಿ ನಮೂದಿಸಬೇಕು. ಅಲ್ಲದೇ, ಅರ್ಹ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದರು.
ಕಳೆದ ವರ್ಷ ಸಂಭವಿಸಿದ ನೆರೆಗೆ ಹಾನಿಗೊಳಗಾಗಿದ್ದು, ಪರಿಹಾರ ಸಿಗದೇ ಬಾಕಿ ಉಳಿದಿರುವ ಕುಟುಂಬಗಳಿಗೆ ಶೀಘ್ರವೇ ಪರಿಹಾರ ನೀಡಬೇಕು. ಇದಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಆಯಾ ತಾಲ್ಲೂಕು ತಹಶೀಲ್ದಾರರು ತ್ವರಿತವಾಗಿ ಇತ್ಯರ್ಥಗೊಳಿಸಬೇಕು. ಜಿಲ್ಲೆಯಾದ್ಯಂತ ಸುರಿದಿರುವ ನಿರಂತರ ಮಳೆಗೆ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈಗಾಗಲೇ ರಸ್ತೆ ನಿರ್ಮಿಸಿ, ನಿರ್ವಹಣೆಯ ಅವಧಿ ಮುಗಿಯದಿರುವ ಗುತ್ತಿಗೆದಾರರು ಅಥವಾ ಸಂಬಂಧಿಸಿದ ಏಜೆನ್ಸಿಗಳಿಂದ ಸಾರ್ವಜನಿಕರ ಅವಶ್ಯಕತೆಗನುಗುಣವಾಗಿ ರಸ್ತೆ ದುರಸ್ಥಿಗೊಳಿಸಲು ಕ್ರಮ ವಹಿಸಬೇಕು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೊರೋನಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದ ಅವರು, ಈಗಾಗಲೇ ನಿಗಾದಲ್ಲಿರುವ ಕೊರೋನಾ ಸೋಂಕಿತರು ಮತ್ತು ಶಂಕಿತರ ಆರೋಗ್ಯದಲ್ಲಿ ಏರುಪೇರಾದಲ್ಲಿ ತಕ್ಷಣವೇ ನಿಗದಿತ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಹೋಂ ಕ್ವಾರಂಟೈನ್‌ನಲ್ಲಿ ಇರುವವರ ಸಂಖ್ಯೆ ಹೆಚ್ಚುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರವಾಹ ಪೀಡಿತ ಫಲಾನುಭವಿಗಳಿಗೆ ಪರಿಹಾರ ಒದಗಿಸಿ
Advertisement