ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ಎರಡನೇ ಹಂತದ ಗ್ರಾ. ಪಂ.ಚುನಾವಣೆಯು ತಾರಕ್ಕೇರಿದೆ. ಒಂದನೆಯ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿತ್ತು. ಆದರೆ ಇಂದು ನಡೆಯುತ್ತಿರುವ ಚುನಾವಣೆ ಕಾಂಗ್ರೆಸ್ ಬಿಜೆಪಿ ಪಕ್ಷಗಳ ಬೆಂಬಲಿಗರ ಮಧ್ಯ ಜಟಾಪಟಿ ನಡೆದಿದ್ದು, ಮತದಾನ ಸ್ಥಗಿತಗೊಂಡಿತ್ತು. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆಯಿಂದಾಗಿ ಮತಗಟ್ಟೆ 1ರಲ್ಲಿ ಎರಡು ಗಂಟೆಗಳ ಕಾಲ ಮತದಾನ ಸ್ಥಗಿತಗೊಂಡಿತ್ತು.
ಮೆಣಸಗಿ ಗ್ರಾಮ ಪಂಚಾಯತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಜಿ.ಪಂ.ಸದಸ್ಯ ಶಿವಕುಮಾರ್ ನೀಲಗುಂದ ಮತಗಟ್ಟೆ ಒಂದರಲ್ಲಿ ಮತದಾನ ಮಾಡಲು ಹೋಗಿದ್ದ ವೇಳೆ ಮತಗಟ್ಟೆಯ ಏಜೆಂಟರ್ ಅಲ್ಲದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮತಗಟ್ಟೆಯಲ್ಲಿ ಮತದಾನ ಮಾಡಲು ಹೋದಾಗ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಶಿವಕುಮಾರ್ ಆರೋಪ ಮಾಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೂ ಕೂಡ ಗಲಾಟೆಗೆ ಕಾರಣ ಎನ್ನಲಾಗುತ್ತಿದೆ.
ನಮ್ಮ ಬೆಂಬಲಿತ ಅಭ್ಯರ್ಥಿಗೆ ಮತ ಹಾಕುವಂತೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟವಾಗಿದೆ.
ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದ್ದು, ಸೂಕ್ತ ಬಂದೋಬಸ್ತ್ ಮಾಡಿದ್ದಾರೆ.
ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರಿಂದ ಮತ್ತೆ ಮತದಾನ ಆರಂಭವಾಗಿದೆ.