ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಶಾಸಕ ಬಸನಗೌಡ ಯತ್ನಾಳ ನೀಡಿದ್ದು ಅಶಿಸ್ತಿನ ಹೇಳಿಕೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲೆಯ ಕೊಳೂರಿನಲ್ಲಿ ಬುಧವಾರ ಕುಸಿದ ಬ್ರಿಡ್ಜ್ ಕಮ್ ಬ್ಯಾರೇಜ್ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇನ್ನೂ ಮೂರು ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿ. ಪಕ್ಷದಲ್ಲಿ ಇದ್ದುಕೊಂಡು ವರಿಷ್ಠರ ವಿರುದ್ಧ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಯತ್ನಾಳ ಹೇಳಿಕೆ ವಿರುದ್ಧ ಕಿಡಿ ಕಾರಿದರು.
ಕೃಷಿ ಇಲಾಖೆ ಹಲವು ವರ್ಷಗಳಿಂದ ತುಕ್ಕು ಹಿಡಿದಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕೆಲವರಿಗೆ ನೋವಾಗುವುದು ಸಹಜ.
ಅನಾಮಧೇಯ ಪತ್ರಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಇಂಥ ವಿಷಯಗಳಿಗೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ, ಪ್ರಕಟ ಮಾಡಿದರೆ ಅಂಥವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಕೊಳೂರು ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಕಳಪೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರೇ ಕುಸಿದ ಬ್ರಿಡ್ಜ್ ಕಮ್ ಬ್ಯಾರೇಜ್ ದುರಸ್ತಿ ಕೆಲಸ ಮಾಡ್ತಾರೆ ಎಂದು ಅವರು ಹೇಳಿದರು.
ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮತ್ತಿತರರು ಇದ್ದರು.