ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಹಾನಿಗೀಡಾಗಿದ್ದು, ತಕ್ಷಣವೇ ಸಂಬಂಧಿಸಿದ ಇಲಾಖಾಧಿಕಾರಿಗಳು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆ ಸುಧಾರಣೆಗೆ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಅ. 16 ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ರಸ್ತೆಗಳು ಹಾನಿಯಾಗಿ ನಿತ್ಯ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದಷ್ಟು ಶೀಘ್ರವಾಗಿ ರಸ್ತೆ ಸುಧಾರಣೆಗೆ ಮುಂದಾಗುವ ಮೂಲಕ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.
ವಾರದೊಳಗೆ ವರದಿ ಸಲ್ಲಿಸಿ:ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಜಿಲ್ಲೆಯ ಬೆಳೆಹಾನಿ ಕುರಿತು ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ನಡೆಸುತ್ತಿರುವ ಸಮೀಕ್ಷೆ ಕಾರ್ಯ ಶೀಘ್ರ ಪೂರ್ಣಗೊಳಿಸಿ ಪರಿಹಾರ ಪೋರ್ಟಲ್‌ನಲ್ಲಿ ಮಾಹಿತಿ ಒದಗಿಸಬೇಕು. ಅಧಿಕ ಮಳೆಯಿಂದಾಗಿ ಜಿಲ್ಲೆಯ ಗ್ರಾಮೀಣ, ನಗರ, ಪಟ್ಟಣ ಪ್ರದೇಶಗಳಲ್ಲಿ ಹಾನಿಗೊಳಗಾದ ಮನೆಗಳ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಿ, ಕೂಡಲೇ ಪರಿಹಾರ ಒದಗಿಸಿ, ಒಂದು ವಾರದೊಳಗೆ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಪ್ರಮಾಣ ಕಡಿಮೆಯಾದ ಬಳಿಕ ಎಲ್ಲ ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಿ, ಹಾನಿಗೊಳಗಾದ ಬೆಳೆ, ಮನೆ ಹಾನಿಗಳ ಸಮೀಕ್ಷೆ ಮಾಡಿ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದರು.
ಅರಿವು ಮೂಡಿಸಿ
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜನರಲ್ಲಿ ಜನಾಂದೋಲನ ರೀತಿಯ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಏರ್ಪಡಿಸಿ, ಅರಿವು ಮೂಡಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಸದೆ ನಿಯಮಗಳ ಉಲ್ಲಂಘಿಸಿದಲ್ಲಿ ದಂಡ ವಿಧಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಬೇಕು.
– ಎಂ. ಸುಂದರೇಶ್ ಬಾಬು, ಜಿಲ್ಲಾಧಿಕಾರಿ, ಗದಗ
ಅಗತ್ಯವಿದ್ದಲ್ಲಿ ಖಾಸಗಿ ವೈದ್ಯರ ಬಳಕೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾಲೂಕುವಾರು ನಿಗದಿತ ಗುರಿಯನುಸಾರ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಬೇಕು. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಿ ಪರೀಕ್ಷಿಸುವ ಕಾರ್ಯ ಚುರುಕುಗೊಳಿಸಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಗೃಹ ನಿಗಾದಲ್ಲಿರುವವರ ಮನೆಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಪರಿಶೀಲಿಸಬೇಕು. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಂಪರ್ಕದ ಹೆಚ್ಚುವರಿ 50 ಹಾಸಿಗೆಗಳ ವ್ಯವಸ್ಥೆ ಮಾಡಿಕೊಂಡಿದ್ದು, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಸೋಂಕಿನಿಂದ ದಾಖಲಾದ ರೋಗಿಗೆ ತುರ್ತು ಚಿಕಿತ್ಸೆಯ ಅಗತ್ಯವಿದ್ದಲ್ಲಿ ಅವರನ್ನು ತಕ್ಷಣ ಜಿಲ್ಲೆಯ ನಿಗದಿತ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಬೇಕು. ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿದ್ದಲ್ಲಿ ಖಾಸಗಿ ವೈದ್ಯರನ್ನು ಬಳಸಿಕೊಳ್ಳಬೇಕು. ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ಸಿಬ್ಬಂದಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ಒದಗಿಸಬೇಕೆಂದು ಸೂಚಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ ಕೆ., ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಇತರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.