HomeKarnataka Newsರೈತರಿಗೆ ₹30 ಸಾವಿರ ಕೋಟಿ ಸಾಲ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಡಿಕೆಶಿ ಬಂಪರ್ ಘೋಷಣೆ

ರೈತರಿಗೆ ₹30 ಸಾವಿರ ಕೋಟಿ ಸಾಲ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಡಿಕೆಶಿ ಬಂಪರ್ ಘೋಷಣೆ

For Dai;y Updates Join Our whatsapp Group

ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು.

ತಮ್ಮ ಭಾಷಣದಲ್ಲಿ ರಾಜ್ಯದ ಆಡಳಿತ, ಆರ್ಥಿಕ ಪ್ರಗತಿ, ಬರ ನಿರ್ವಹಣೆ, ಗ್ಯಾರಂಟಿ ಯೋಜನೆಗಳು, ರೈತರು, ವಿದ್ಯಾರ್ಥಿಗಳು ಹಾಗೂ ಯುವಜನರ ಭವಿಷ್ಯ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಕಳೆದ ಎರಡು ತಿಂಗಳಲ್ಲಿ ಜನಸ್ನೇಹಿ ಆಡಳಿತಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಶಾಸಕರು ಸಭೆ ನಡೆಸಿ ಜನರ ಕುಂದುಕೊರತೆಗಳನ್ನು ಆಲಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಿಸ್ಥಿತಿಯ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಸಚಿವರನ್ನು ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಕೆರೆ-ಕಟ್ಟೆಗಳನ್ನು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕದ ಆರ್ಥಿಕತೆಗೆ 3 ಟ್ರಿಲಿಯನ್ ಡಾಲರ್ ಗುರಿ:

ಕರ್ನಾಟಕದ ತಲಾದಾಯ ಪ್ರಸ್ತುತ 4.33 ಲಕ್ಷ ರೂ. ತಲುಪಿದೆ ಎಂದು ಸಿಎಂ ಹೇಳಿದರು. ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಕರ್ನಾಟಕದ ಆರ್ಥಿಕತೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು 3 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಹೊಂದಿದ್ದು, ಅದಕ್ಕಾಗಿ ಬೃಹತ್ ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ಘೋಷಿಸಿದರು.

ಗ್ಯಾರಂಟಿ ಯೋಜನೆಗಳ ಪ್ರಸ್ತಾಪ:

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 15 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಯುವಕರಿಗೆ AI ಶಿಕ್ಷಣ:

ಯುವಜನರ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಉದ್ಯೋಗ ಮಾರುಕಟ್ಟೆಯಲ್ಲಿನ ಬದಲಾವಣೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಶಿಕ್ಷಣವನ್ನು ಪರಿಚಯಿಸುವ ನೂತನ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಯುವಜನರಲ್ಲಿ ದೇಶಭಕ್ತಿ, ಸಮಾನತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದಲ್ಲಿ 10 ಸಾವಿರ ಭಾರತ್ ಜೋಡೋ ತಂಡಗಳನ್ನು ರಚಿಸುವ ಬೃಹತ್ ಯೋಜನೆ ಕೈಗೊಳ್ಳಲಾಗುವುದು ಎಂದರು.

ಯುವಕರಿಗೆ ಅಗತ್ಯವಿರುವ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರ್ಕಾರ ಆದ್ಯತೆಯ ಮೇಲೆ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ರೈತರಿಗೆ ಪರಿಹಾರ, ಸಾಲ ಸೌಲಭ್ಯ:

ಬೆಳೆ ವಿಮೆ ಯೋಜನೆಯಡಿ 12.35 ಲಕ್ಷ ರೈತರಿಗೆ 1,300 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಳೆದ ಒಂದು ವರ್ಷದಲ್ಲಿ 9 ಲಕ್ಷ ಹಾಲು ಉತ್ಪಾದಕ ರೈತರ ಖಾತೆಗಳಿಗೆ 2,600 ಕೋಟಿ ರೂ. ಪ್ರೋತ್ಸಾಹಧನ ವರ್ಗಾಯಿಸಲಾಗಿದೆ ಎಂದರು.

ಸಹಕಾರ ಕ್ಷೇತ್ರದಿಂದ ಪ್ರತಿದಿನ 1.10 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ‘ನಂದಿನಿ’ ಬ್ರ್ಯಾಂಡ್ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ರೈತರ ಮನೆ ಬಾಗಿಲಿಗೆ ಪಶುವೈದ್ಯಕೀಯ ಸೇವೆ ಒದಗಿಸಲು 275 ಸಂಚಾರಿ ಪಶುವೈದ್ಯಕೀಯ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಈ ವರ್ಷ 38 ಲಕ್ಷ ರೈತರಿಗೆ 30 ಸಾವಿರ ಕೋಟಿ ರೂ. ಸಾಲ ಸೌಲಭ್ಯ ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

ಪರೀಕ್ಷಾ ಅಕ್ರಮ ತಡೆಗೆ ಹೊಸ ವ್ಯವಸ್ಥೆ:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ಕುರಿತು ಮಾತನಾಡಿದ ಸಿಎಂ, ವಿದ್ಯಾರ್ಥಿಗಳ ಆತಂಕವನ್ನು ನಿವಾರಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ವೈಜ್ಞಾನಿಕ ಬದಲಾವಣೆ ತರಲು ಪರಿಣಿತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಎರಡು ತಿಂಗಳಲ್ಲಿ ವರದಿ ನೀಡಲಿದ್ದು, ಅದರ ಆಧಾರದ ಮೇಲೆ ದೇಶಕ್ಕೇ ಮಾದರಿಯಾಗುವ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ಹಿಂದುಳಿದ ತಾಲೂಕುಗಳಲ್ಲಿ ಕೈಗಾರಿಕೆ:

ರಾಜ್ಯದ ಹಿಂದುಳಿದ ತಾಲೂಕುಗಳಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಸ್ಥಳೀಯವಾಗಿ ಕೈಗಾರಿಕೆಗಳು ಸ್ಥಾಪನೆಯಾದರೆ ಅಲ್ಲಿನ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಲಿವೆ. ಇದರಿಂದ ರಾಜ್ಯದಲ್ಲಿ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಒತ್ತು:

ಕಲ್ಯಾಣ ಕರ್ನಾಟಕ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಸಿಎಂ ಹೇಳಿದರು.

‘ಕಲ್ಯಾಣಪಥ’ ಯೋಜನೆಯಡಿ 1,150 ಕಿಲೋಮೀಟರ್ ಉದ್ದದ ರಸ್ತೆಗಳ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಬಸವಣ್ಣನವರ ತತ್ವಗಳಿಗೆ ಆದ್ಯತೆ:

ಸರ್ಕಾರ ಬಸವಣ್ಣನವರ ತತ್ವಾದರ್ಶಗಳನ್ನು ಆಧಾರವಾಗಿಟ್ಟುಕೊಂಡು ಆಡಳಿತ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಮೌಲಾನಾ ಆಜಾದ್ ಅವರನ್ನು ಸ್ಮರಿಸಿದರು.

ಜ್ಞಾನ, ವಿಜ್ಞಾನ, ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ. ಯುವಜನತೆಯ ಭವಿಷ್ಯವನ್ನು ಉಜ್ವಲಗೊಳಿಸುವುದು ಹಾಗೂ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img