ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ಅಭಿವೃದ್ಧಿಯೆಡೆಗೆ ಸಾಗುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ ಅವರು ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಶನಿವಾರ ಏರ್ಪಡಿಸಲಾದ ನರಗುಂದ ಪುರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನರಗುಂದದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸುಮಾರು 550 ಲಕ್ಷ ರೂ.ಗಳಲ್ಲಿ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದರು. ಅದೇ ರೀತಿ ಬಹುದಿನಗಳ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಯಾಗಿದ್ದ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 30 ಲಕ್ಷ ರೂ.ಗಳಲ್ಲಿ ಕೈಗೊಳ್ಳಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಸಚಿವ ಪಾಟೀಲ ಹೇಳಿದರು.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದರಿಂದ ಜನಜೀವನ ಯಥಾಸ್ಥಿತಿಗೆ ಮರಳುತ್ತಿದ್ದು ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತಿದೆ. ಈ ಆದಾಯವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯಡೆಗೆ ಕೊಂಡೊಯ್ಯೋಣವೆಂದರು.
ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ಭಾವನಾ ಪಾಟೀಲ, ಉಪಾಧ್ಯಕ್ಷ ಪ್ರಶಾಂತ ಜೋಶಿ, ತಹಸೀಲ್ದಾರ ಪ್ರಶಾಂತ , ಪ್ರಮುಖರಾದ ಹಾಲಪ್ಪನವರ, ಎಮ್.ಎಸ್. ಪಾಟೀಲ, ಅಜ್ಜಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು.