ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ
ಮಹಾಮಾರಿಯ ಎರಡನೇ ಅಲೆಯಲ್ಲಿ ಮರಣ ಮೃದಂಗ ತನ್ನ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿಯೇ ಹೆಚ್ಚಿನ ಸೋಂಕಿತರು ಬಲಿಯಾಗುತ್ತಿರುವುದಕ್ಕೆ ಜನ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ 24 ಗಂಟೆಯಲ್ಲಿ ಜಿಲ್ಲೆಯ 20 ಜನ ಸಾವನ್ನಪ್ಪಿದ್ದಾರೆ. ಈ ಪೈಕಿ 6 ಜನ ಸಿಎಲ್ ಎಸ್ ರೋಗಿಗಳು ಸಾವನ್ನಪ್ಪಿದ್ದು, 14 ಜನ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ರಾತ್ರಿ ಸಂದರ್ಭದಲ್ಲಿಯೇ ಹೆಚ್ಚಿನ ಜನ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸೋಂಕಿತರ ಸಂಖ್ಯೆಯೊಂದಿಗೆ ಮೃತರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗಷ್ಟೇ ಆಸ್ಪತ್ರೆಯಲ್ಲಿ ಆಕ್ಸಿಜನ್ ತೊಂದರೆಯಿಂದಾಗಿ 24 ರೋಗಿಗಳು ಉಸಿರು ಚೆಲ್ಲಿದ್ದರು. ಆದರೆ, ವಿರೋಧ ಪಕ್ಷದ ನಾಯಕರು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಬರೋಬ್ಬರಿ 34 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಶುರುವಾದಾಗಿನಿಂದ ಬರೋಬ್ಬರಿ 113 ಜನ ಸಾವನ್ನಪ್ಪಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.