ವಿಜಯಸಾಕ್ಷಿ ಸುದ್ದಿ, ಬೆಳಗಾವಿ
ಮಹಾರಾಷ್ಟ್ರದಲ್ಲಿ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಹೆಚ್ಚಿನ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ.
ಇದರ ಪರಿಣಾಮ ಚಿಕ್ಕೋಡಿ ತಾಲೂಕಿನಲ್ಲಿ ನದಿಗಳು ಉಕ್ಕಿಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.

ಮಹಾರಾಷ್ಟ್ರದ ಕೊಯ್ನಾ, ರಾಧಾನಗರಿ, ವಾರಣಾ, ರಾಜಾಪೂರ ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚಿನ ನೀರನ್ನು ನದಿಗಳಿಗೆ ಹರಿಬಿಡಲಾಗುತ್ತಿದೆ. ಕೃಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್, ರಾಜಾಪೂರ ಜಲಾಶಯದಿಂದ 1 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಹೀಗಾಗಿ ಕೃಷ್ಞಾ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳು ಉಕ್ಕಿಹರಿಯುತ್ತಿದ್ದು,
ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ಜಲಾವೃತ್ತವಾಗಿವೆ.
ಇಂಗಳಿ, ಮಾಂಜರಿ, ಯಡೂರ, ಚಂದೂರ, ಅಂಕಲಿ, ಸೌಂದತ್ತಿ ಸೇರಿದಂತೆ ನದಿತೀರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
ಮುಂಜಾಗ್ರತಾ ಕ್ರಮವಾಗಿ ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಬೋಟ್ ಗಳ ವ್ಯವಸ್ಥೆ ಮಾಡಿದ್ದು, ಎನ್ ಡಿಆರ್ ಎಫ್ ತಂಡದ ನಿಯೋಜನೆ ಮಾಡಲಾಗಿದೆ. ನದಿ ತೀರದತ್ತ ಜನರು ಹೋಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.