-ಸೆಪ್ಟೆಂಬರ್ 8ರಂದು ಡಿಸಿ ಕಚೇರಿ ಎದುರು ಧರಣಿ
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿದೆ . ರೈಲ್ವೆ , ರಸ್ತೆ , ವಿದ್ಯುನ್ಮಾನ ತಂತ್ರಜ್ಞಾನ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ , ಮಂಗಳನ ಅಂಗಳದ ವರೆಗೂ ತಲುಪಿದ್ದೇವೆ . ಆದರೆ , ಜೀವನಕ್ಕೆ ಅತ್ಯಾವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಸ್ಥಿತಿಯತ್ತ ಸಾಗುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನೀಡುವಂತೆ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರಗೌಡ ಕಡ್ಡಿಪುಡಿ ಆಗ್ರಹಿಸಿದರು.
ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1990 ರ ದಶಕದಿಂದ 3.5 ಲಕ್ಷಕ್ಕೂ ಅಧಿಕ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ . ಪ್ರತಿ ವರ್ಷ ಕೃಷಿ ತ್ಯಜಿಸಿ , ನಗರದತ್ತ ಸಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರುತ್ತಿದೆ . ರೈತರು ತಾವು ಬೆಳೆದ ಬೆಳೆಗಳ ಒಳಸುರಿಗಳ ವೆಚ್ಚ ಅಧಿಕವಾಗಿ , ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸುತ್ತಾರೆ. ಆದರೆ ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ . ಮತ್ಯಾರೊ ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಗೊಂಡು, ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ, ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ “ ಲಾಭದಾಯಕ ಬೆಲೆ ” ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಸರ್ಕಾರದ ಒಳ್ಳೆಯ ಚಿಂತನೆಯೇ ಸರಿ . ಆದರೆ , ಸರ್ಕಾರ ಕೇವಲ ಕನಿಷ್ಠ ಬೆಂಬಲ ಬೆಲೆಯನ್ನು ( MISP ) ಘೋಷಿಸಿದರೆ ಸಾಲದು. ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ , ಖರೀದಿ ಗ್ಯಾರಂಟಿ ನೀಡಿ , ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಯಾಗಬಾರದು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹನುಮಂತಪ್ಪ ಗೊಂದಿ, ರಾಯಪ್ಪ ಹುಯಿಲಗೋಳ ಮತ್ತಿತರರು ಇದ್ದರು.