ಕೋವಿಡ್ ಪರೀಕ್ಷೆಯೊಂದಿಗೆ ಗೋವಾಕ್ಕೆ ಬಸ್ ಸಂಚಾರ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

Advertisement

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಯೊಂದಿಗೆ ನಗರದಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.

ಗೋವಾ ಸರ್ಕಾರದ ಕೋವಿಡ್ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಆ ರಾಜ್ಯಕ್ಕೆ ಪ್ರವೇಶಿಸುವ ಅನ್ಯ ರಾಜ್ಯಗಳ ಪ್ರಯಾಣಿಕರು 72 ಗಂಟೆಗಳ ಮುಂಚಿತವಾಗಿ ಪಡೆದಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ನಮ್ಮ ರಾಜ್ಯದಿಂದ ನಿತ್ಯ ನೂರಾರು ಜನರು ಕೆಲಸ ಕಾರ್ಯಗಳಿಗಾಗಿ ಗೋವಾಕ್ಕೆ ತೆರಳುತ್ತಾರೆ. ಆದರೆ ಪ್ರಯಾಣಕ್ಕೆ ಮೊದಲು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸಾಧ್ಯವಾಗದ ಕಾರಣ ಬಹಳಷ್ಟು ತೊಂದರೆಯಾಗಿತ್ತು.

ಪರೀಕ್ಷೆ ಮಾಡಿಸಿಕೊಳ್ಳದೆ ತೆರಳುವವರಿಗೆ ಗೋವಾ ರಾಜ್ಯದ ಗಡಿಯಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿತ್ತು. ಅದಕ್ಕೆ 270 ರೂ.ಪಾವತಿಸಬೇಕಾಗಿತ್ತು. ಸೋಂಕು ದೃಢಪಟ್ಟರೆ ಪ್ರವೇಶ ನಿರಾಕರಿಸಲಾಗುತ್ತಿತ್ತು. ಇದರಿಂದ ಅಲ್ಲಿಯವರೆಗೂ ಪ್ರಯಾಣ ಮಾಡಿದವರು ತೀವ್ರ ಸಂಕಷ್ಟ ಅನುಭವಿಸಬೇಕಾಗಿತ್ತು. ಅಂತಹವರ ಅನುಕೂಲಕ್ಕಾಗಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ನೆಗೆಟಿವ್ ವರದಿ ಇರುವ ಪ್ರಯಾಣಿಕರಿಗೆ ಗೋವಾಕ್ಕೆ ಕೋವಿಡ್ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಗೋವಾಕ್ಕೆ ಹೋಗುವ ಪ್ರಯಾಣಿಕರು ಬೆಳಗ್ಗೆ ೧೦ ಗಂಟೆಯ ಒಳಗೆ ಗೋಕುಲ ರಸ್ತೆ ಬಸ್ ನಿಲ್ದಾಣಕ್ಕೆ ಬರಬೇಕು. ಅಲ್ಲಿ ಅವರಿಗೆ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲು ತಾಲೂಕು ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರಯಾಣಿಕರಿಗೆ ಮೊದಲು ರಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ. ಅದರಲ್ಲಿ ನೆಗೆಟಿವ್ ವರದಿ ಬಂದವರಿಗೆ ಮಾತ್ರವೇ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿ ಮುಂದಿನ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸೋಂಕು ದೃಢಪಟ್ಟರೆ ಪ್ರಯಾಣಕ್ಕೆ ಅನುಮತಿ ನೀಡುವುದಿಲ್ಲ.

ಲಾಕ್‌ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ಪ್ರತಿ ನಿತ್ಯ ಪಣಜಿಗೆ ಒಂದು ರಾಜಹಂಸ ಮತ್ತು 8 ವೇಗದೂತ ಬಸ್, ವಾಸ್ಕೋಗೆ 1 ಮತ್ತು ಮಡಗಾಂವ್‌ಗೆ 1 – ಒಟ್ಟು 11 ಬಸ್ಸುಗಳು ಸಂಚರಿಸುತ್ತಿದ್ದವು. ಕೋವಿಡ್ ಎರಡನೆ ಅಲೆ ಲಾಕ್‌ಡೌನ್ ಕಾರಣದಿಂದಾಗಿ ಏಪ್ರಿಲ್ 27ರಿಂದ ಈ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಭಾಗಶಃ ನಿರ್ಬಂಧಗಳ ತೆರವು ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಪಣಜಿಗೆ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಬಸ್ಸುಗಳು ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಸಂಚರಿಸುತ್ತವೆ. ಪ್ರಯಾಣಿಕರ ಬೇಡಿಕೆ ಗಮನಿಸಿ ಮುಂದಿನ ದಿನಗಳಲ್ಲಿ ವಾಸ್ಕೋ ಮತ್ತು ಮಡಗಾಂವಗೆ ಬಸ್ ಗಳನ್ನು ಓಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here