ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿದರೆ ಹುಷಾರ್!! ಸರಕಾರಿ ವೈದ್ಯರಿಗೆ ಡಿಸಿ ಖಡಕ್ ಎಚ್ಚರಿಕೆ

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

Advertisement

ಕೊಪ್ಪಳ ಜಿಲ್ಲಾಸ್ಪತ್ರೆ ಮತ್ತು ಇನ್ನಿತರ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳು ಲಭ್ಯವಿದ್ದರೂ ಸರ್ಕಾರಿ ವೈದ್ಯಾಧಿಕಾರಿಗಳು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿ ಅಲ್ಲೇ ತೆರಳಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಇಂತಹ ಪ್ರಕರಣಗಳು ಸಾಬೀತಾದಲ್ಲಿ ಸಂಬಂಧಿಸಿದ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ಅಕ್ಟೋಬರ್ 04 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆಗೆ ಸಂಬಂಧಿಸಿದ ಸಭೆಯಲ್ಲಿ ಕೆಲವು ವೈದ್ಯಕೀಯ ವಿಭಾಗಗಳ ಮುಖ್ಯಸ್ಥರು, ಸೂಕ್ತ ವೈದ್ಯಕೀಯ ಸೇವೆ ನೀಡದೇ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುವ ಮಾಹಿತಿಯು ಸಚಿವರ ಗಮನಕ್ಕೆ ಬಂದಿದೆ.

ಈ ವಿಷಯವನ್ನು ಸಚಿವರು ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುವುದು ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ವಿಭಾಗ ಮುಖ್ಯಸ್ಥರ ಆದ್ಯ ಕರ್ತವ್ಯವಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿರುವ ಸೌಲಭ್ಯಗಳಿಗನುಗುಣವಾಗಿ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಬಹುದು. ಆದರೆ, ಪಸ್ತುತ ದಿನಗಳಲ್ಲಿ ಲಭ್ಯವಿರುವ ಸೌಲಭ್ಯಗಳಿಗೆ ತಕ್ಕಂತೆ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡದೇ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ. ಅದೇ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿರುವುದು ಗಂಭೀರ ಸ್ವರೂಪದ ಕರ್ತವ್ಯ ಲೋಪವಾಗಿರುತ್ತದೆ.

ಅಪರಾಧಿಕ ದಂಡ ಪ್ರಕ್ರಿಯೆ ಸಂಹಿತೆ 1973 (ಸಿ.ಆರ್.ಪಿ.ಸಿ) ಹಾಗೂ ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧಿಕ ಪ್ರಕರಣವಾಗಿರುತ್ತದೆ. ಪ್ರಯುಕ್ತ ತಮ್ಮ ಅಧೀನದ ಎಲ್ಲಾ ವೈದ್ಯಾಧಿಕಾರಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳಿಗುಣವಾಗಿ ಸೂಕ್ತ ಚಿಕಿತ್ಸೆಗೆ ನಿರ್ದೇಶನ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಿಮ್ಸ್ ನಿರ್ದೇಶಕರಿಗೆ, ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಹಾಗೂ ವೈದ್ಯಕೀಯ ಅಧೀಕ್ಷಕರಿಗೆ ಸೂಚಿಸಿದ್ದಾರೆ.

ಆದ್ದರಿಂದ ಆಯಾ ವಿಭಾಗದ ಮುಖ್ಯಸ್ಥರು ಮತ್ತು ಸರ್ಕಾರಿ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳಿಗನುಗುಣವಾಗಿ ಸೂಕ್ತ ಚಿಕಿತ್ಸೆಯನ್ನು ನೀಡದೇ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿದ ಪ್ರಕರಣಗಳು ಕಂಡುಬಂದಲ್ಲಿ ಅಂತಹ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಸೇವಾ ನಿಯಮಾವಳಿಗಳು 1958 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅಪರಾಧಿಕಾ ಸಂಹಿತೆ 1973ರ ಅಡಿಯಲ್ಲಿನ ಸಂಬಂಧಿಸಿದ ನಿಯಮಗಳನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಹಾಗೂ ಜಿಲ್ಲಾಸ್ಪತ್ರೆಗೆ ವಿವಿಧ ಮೂಲಗಳಿಂದ ಕೋವಿಡ್ 1ನೇ, 2ನೇ ಅಲೆಯಲ್ಲಿ ಮತ್ತು 3ನೇ ಅಲೆಯ ಸಂಭವದ ಹಿನ್ನೆಲೆಯಲ್ಲಿ ವೈದ್ಯಕೀಯ ಪರಿಕರಗಳನ್ನು ಖರೀದಿಸಿ ಸರಬರಾಜು ಮಾಡಲಾಗಿದೆ. ಸರಬರಾಜಾದ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಬೇಕು. ಯಾವುದೇ ವೈದ್ಯಕೀಯ ಪರಿಕರಗಳು ಸುಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಅದಕ್ಕೆ ಸಂಬಂಧಿಸಿದವರನ್ನೇ ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಜರುಗಿಸಲಾಗುವುದು.

ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥರುಗಳ ಗಮನದಲ್ಲಿದ್ದೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಸಹಕಾರ ನೀಡಿದಂತಾಗುತ್ತದೆ. ಆದ್ದರಿಂದ ಸಹಕರಿಸಿದ ಕಾರಣಕ್ಕಾಗಿ ಸಂಬಂಧಿಸಿದ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ದಂಡನಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here