ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು ಸೇರಿದಂತೆ ಹಲವು ಸಾರ್ವಜನಿಕ ಹಿತದ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಅವರು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಮನವಿ ಸಲ್ಲಿಸಿದರು.
ಗದಗ ನಗರಕ್ಕೆ ಭೇಟಿ ನೀಡಿದ್ದ ಉಪಲೋಕಾಯುಕ್ತರನ್ನು ಭೇಟಿಯಾದ ಅವರು, ಜಿಲ್ಲೆಯಿಂದ ವರ್ಗಾವಣೆಯಾಗಿರುವ ಅಧಿಕಾರಿಗಳು ಮತ್ತೆ ಇದೇ ಜಿಲ್ಲೆಗೆ ಅಥವಾ ಇಲಾಖೆಗೆ ಮರಳಿ ಬಂದು ಕಾರ್ಯನಿರ್ವಹಿಸುತ್ತಿರುವುದರಿಂದ ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗಮನ ಸೆಳೆದರು.
ದೀರ್ಘಕಾಲದಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡುವುದರ ಜತೆಗೆ, ವರ್ಗಾವಣೆಯಾದವರು ಪುನಃ ಇದೇ ಜಿಲ್ಲೆಗೆ ಬಾರದಂತೆ ಸೂಕ್ತ ಕಾನೂನು ರೂಪಿಸಲು ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.
ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತದ ಬಳಿಯ ಹಳೆ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ನವೀಕರಿಸಿ 50 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಬೇಕು. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು, ಹಿರಿಯ ನಾಗರಿಕರು ಹಾಗೂ ವೃದ್ಧರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯ ದೊರೆಯಲಿದೆ ಎಂದು ಮನವಿಯಲ್ಲಿ ತಿಳಿಸಿದರು.
ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಪೂರ್ಣ ಪ್ರಮಾಣದ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಇದರಿಂದ ಗದಗ ನಗರ ಸೇರಿದಂತೆ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ. ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪೂರ್ಣ ಪ್ರಮಾಣದ ಚಿಕಿತ್ಸೆಗೆ ಅವಕಾಶ ಕಲ್ಪಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು. ಅಂಗನವಾಡಿ ಕೇಂದ್ರಗಳ ದುರಸ್ತಿ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಹಿಂದೆ ಇದ್ದ ಗದಗ–ಬೆಟಗೇರಿ ಅವಳಿ ನಗರ ಸಾರಿಗೆ ಬಸ್ಗಳ ಸಂಚಾರವನ್ನು ಪುನರಾರಂಭಿಸಬೇಕು ಎಂದು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಸಾರ್ವಜನಿಕ ಹಿತಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಿ ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.
“ಜಿಲ್ಲೆಯ ಜನರ ಹಿತದೃಷ್ಟಿಯಿಂದ ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು.”
— ಕೆ.ಎನ್. ಫಣೀಂದ್ರ, ಉಪಲೋಕಾಯುಕ್ತ ನ್ಯಾಯಮೂರ್ತಿ

