ವಿಜಯಸಾಕ್ಷಿ ಸುದ್ದಿ, ಡಂಬಳ
ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ವಾಟರ್ ಮನ್ ಒಬ್ಬನನ್ನು ಕೆಲಸದಿಂದ ತಗೆದು ಹಾಕಿದ್ದಕ್ಕೆ ಬೇಸತ್ತ ಆತ ಗ್ರಾಮ ಪಂಚಾಯತಿಯ ಅಧ್ಯಕ್ಷರ ಛೇಂಬರ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

ಸಮೀಪದ ಹಿರೇವಡ್ಡಟ್ಟಿ ಗ್ರಾಮದಲ್ಲಿ ವಾಟರ್ ಮನ್ ಆಗಿದ್ದ 31 ವರ್ಷದ ಮಲ್ಲಪ್ಪ ಹೊಳಗುಂದಿಯೇ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.

ಕಳೆದ ಹಲವು ವರ್ಷಗಳ ಕಾಲ ಗ್ರಾಮ ಪಂಚಾಯತಿಯಲ್ಲಿ ವಾಟರ್ ಮನ್ ಆಗಿದ್ದ ಮಲ್ಲಪ್ಪನನ್ನು ಅಡಳಿತ ಮಂಡಳಿ ಇತ್ತೀಚೆಗೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಹೊರಿಸಿ ಕೆಲಸಕ್ಕೆ ಬರಬೇಡ ಎಂದು ಹೇಳಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದ ಮಲ್ಲಪ್ಪ ನಿನ್ನೆ ರಾತ್ರಿ ಗ್ರಾಮ ಪಂಚಾಯತಿಯ ಅಧ್ಯಕ್ಷರ ಛೇಂಬರ್ ನಲ್ಲಿ ಇರುವ ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕುಟುಂಬಸ್ಥರ ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲ ಮುಟ್ಟಿದೆ.
ಮಲ್ಲಪ್ಪನ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಕೂಡ ಪ್ರತಿಭಟನೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ.
ನೊಂದ ಕುಟುಂಬಕ್ಕೆ ನ್ಯಾಯ ಕೊಡಿ, ಗ್ರಾಮ ಪಂಚಾಯತಿ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.