ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೊರೊನಾ ಸಂದರ್ಭದಲ್ಲಿ ಈ ಇಬ್ಬರೂ ಅಧಿಕಾರಿಗಳ ನಡುವೆ ಸಂಘರ್ಷ ಉಂಟಾಗಿತ್ತು. ಹೀಗಾಗಿ ಈ ಜಡೆ ಜಗಳ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.
ಮೈಸೂರು ನೂತನ ಜಿಲ್ಲಾಧಿಕಾರಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಕೊರೊನಾ ನಿರ್ವಹಣೆ ವಿಷಯದಲ್ಲಿ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಕೆಲಸ ಮಾಡಿದರೂ ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ನಮ್ಮನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಶಿಲ್ವಾ ನಾಗ್ ಆರೋಪಿಸಿದ್ದರು.
ಬಹುತೇಕ ಜನ ಪ್ರತಿನಿಧಿಗಳು ಕೂಡ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ಶಿಲ್ಪಾ ನಾಗ್ ಆರೋಪಕ್ಕೆ ರೋಹಿಣಿ ಸಿಂಧೂರಿ, ಆರೋಪ ಆಧಾರ ರಹಿತವಾಗಿದೆ. ನನ್ನಿಂದ ಕಿರುಕುಳ ನಡೆದಿದೆ ಎನ್ನುವುದು ಸುಳ್ಳು ಎಂದು ಹೇಳಿದ್ದರು.