ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಶಿರಹಟ್ಟಿ ತಾಲೂಕಿನಾದ್ಯಂತ ಆ. ೧೫ರಿಂದ ಸೆ. ೧೫ರವರೆಗೆ ಜಾಬ್ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ನಡೆಯುತ್ತಿದೆ.
ಅಭಿಯಾನದ ಅಂಗವಾಗಿ ಕಡಕೋಳ, ರಣತೂರ ಹಾಗೂ ಮಜ್ಜೂರು ಗ್ರಾಮಗಳಲ್ಲಿ ಜಾಬ್ಕಾರ್ಡ್ ಮೇಳ ಆಯೋಜಿಸಿ ಗ್ರಾಮಸ್ಥರಿಗೆ ಯೋಜನೆಯ ಕುರಿತು ಮಾಹಿತಿ ನೀಡಲಾಯಿತು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ಕಾರ್ಡ್ ಮೇಳ ನಡೆಸಲಾಗುತ್ತಿದ್ದು, ಗ್ರಾಮೀಣ ಕುಟುಂಬಗಳಿಗೆ ಹೊಸ ಜಾಬ್ಕಾರ್ಡ್ ಮಾಡಿಸಿಕೊಡುವುದು, ಹಳೆಯ ಜಾಬ್ಕಾರ್ಡ್ ನವೀಕರಿಸುವುದು, ಇ-ಕೆವೈಸಿ ಪೂರ್ಣಗೊಳಿಸುವುದು ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಗಳಡಿ ನಿಷ್ಕ್ರಿಯ ಜಾಬ್ಕಾರ್ಡ್ ಹೊಂದಿರುವ ಕುಟುಂಬಗಳನ್ನು ಗುರುತಿಸಿ ಮನೆಮನೆಗೆ ಭೇಟಿ ನೀಡಲಾಗುತ್ತಿದೆ. ಈ ವೇಳೆ ಯೋಜನೆಯಡಿ ಲಭ್ಯವಿರುವ ಅಕುಶಲ ಉದ್ಯೋಗ ಹಾಗೂ ವೈಯಕ್ತಿಕ ಸವಲತ್ತುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ನಿರ್ವಹಿಸುವುದಕ್ಕೂ ಒತ್ತು ನೀಡಲಾಗುತ್ತಿದೆ. ಸ್ವಗ್ರಾಮದಲ್ಲಿಯೇ ಉದ್ಯೋಗ ದೊರೆಯುವುದರಿಂದ ಉದ್ಯೋಗ ಅರಸಿ ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಡೆಯುವ ಆಶಯವೂ ಯೋಜನೆಯದ್ದಾಗಿದೆ.
ಜಾಬ್ಕಾರ್ಡ್, ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳು ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಕುರಿತು ಮಾಹಿತಿ ಅಗತ್ಯವಿರುವವರು ತಮ್ಮ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಸಂಪರ್ಕಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ದುರ್ಬಲ ವರ್ಗದವರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಒತ್ತು
ಅಭಿಯಾನದ ಮೂಲಕ ದುರ್ಬಲ ವರ್ಗದ ಜನರ ಯೋಜನಾ ಭಾಗವಹಿಸುವಿಕೆ ಹೆಚ್ಚಿಸಿ, ಉದ್ಯೋಗ ಸೃಷ್ಟಿಯ ಮೂಲಕ ಆರ್ಥಿಕ ಹಾಗೂ ಜೀವನೋಪಾಯ ಭದ್ರತೆ ಕಲ್ಪಿಸುವ ಗುರಿ ಹೊಂದಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಜಲ ಸಂರಕ್ಷಣೆ, ಅಂತರ್ಜಲ ಮರುಪೂರಣ ಹಾಗೂ ದೀರ್ಘಕಾಲೀನ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು.
— ವೀರೇಶ, ಮಾಹಿತಿ, ಶಿಕ್ಷಣ ಸಂಯೋಜಕ
ಸ್ವಗ್ರಾಮದಲ್ಲೇ ಉದ್ಯೋಗ ಒದಗಿಸುವ ಗುರಿ
ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗ ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್ಕಾರ್ಡ್ ಮೇಳದ ಮೂಲಕ ಹೆಚ್ಚಿನ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.
— ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು



