ವಿಜಯಸಾಕ್ಷಿ ಸುದ್ದಿ, ಗದಗ
ಕೋವಿಡ್-19 ಸೋಂಕು ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲು ಮಾಡಿ ಆದೇಶ ಹೊರಡಿಸಿರುತ್ತದೆ. ಈ ಮಾರ್ಗಸೂಚಿಗಳು ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.
ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ. ಅದೇ ರೀತಿ ಅಗತ್ಯ ವಸ್ತು, ಮದ್ಯ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 10 ಗಂಟೆಯ ವರಗೆ ಪಾರ್ಕ್ ಗಳನ್ನು ತೆರೆಯಬಹುದು. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ.
ಪ್ರತಿದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಪ್ರತಿಬಂಧಕಾಜ್ಞೆ ಜಾರಿ
ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.
ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 14 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ ಪ್ರತಿಬಂಧಕಾಜ್ಞೆಯನ್ನು ಜೂನ್ 21 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.