ಪ್ರವಾಹ ಬಾಧಿತ ಪ್ರದೇಶಗಳ ಭೇಟಿ; ಸಂತ್ರರಸ್ತರ ಅಳಲು ಆಲಿಸಿದ ಸಿಎಂ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ನಾಳೆಯೊಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳ ಮಧ್ಯೆಯೇ ಸಿಎಂ ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಸಂತ್ರಸ್ತರ ಅಹವಾಲು ಆಲಿಸಿದರು.
ಹಿರಣ್ಯಕೇಶಿ ನದಿತೀರದಲ್ಲಿರುವ ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಹಾಗೂ ನದಿಗಲ್ಲಿಯ ಬಳಿಯ ಮುಳುಗಡೆ ಪ್ರದೇಶಗಳನ್ನು ಸಿಎಂ ವೀಕ್ಷಿಸಿದರು.

ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಂತ್ರಸ್ತರ ಜತೆ ಮಾತನಾಡಿದ ಅವರು, ಸಂಕೇಶ್ವರ ಪಟ್ಟಣದಲ್ಲಿ ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಐವತ್ತು ಎಕರೆ ಭೂಮಿ‌ ಲಭ್ಯವಿದೆ. ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ.

ಸಂತ್ರಸ್ತರು ಸಹಕರಿಸಿದರೆ ಐವತ್ತು ಎಕರೆ ಜಾಗೆಯಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೆ
ಒಳಗಾದ ಜನರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು. ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ಕೈಗೊಂಡು ಸೂಕ್ತ ಪರಿಹಾರ ನೀಡಲಾಗುವುದು.

ತಾತ್ಕಾಲಿಕವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಭಯ ಪಡುವ ಅಗತ್ಯವಿಲ್ಲ, ಸರ್ಕಾರ ನಿಮ್ಮ ಜತೆಗಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಬಳಿಕ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಮುಳುಗಡೆಯಾಗಿರುವ ರಾಷ್ಟ್ರೀಯ ಹೆದ್ದಾರಿ-4 ಅನ್ನು ಸಿಎಂ ಪರಿಶೀಲಿಸಿದರು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ, ಹುಕ್ಕೇರಿ ಮತಕ್ಷೇತ್ರದ ಶಾಸಕ, ಸಚಿವ ಉಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here