ವಿಜಯಸಾಕ್ಷಿ ಸುದ್ದಿ, ತುಮಕೂರು
ಎಸ್ಸೆಸ್ಸೆಲ್ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಕಿಂಗ್ ಪಿನ್ ಶಿವಕುಮಾರ್ ನನ್ನು ಮಹಾಮಾರಿ ಬಲಿ ಪಡೆದಿದೆ. ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಕಾಗ್ಗೆರೆ ಮೂಲದ ಶಿವಕುಮಾರ್ (65) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಶಿವಕುಮಾರ್ ವಿರುದ್ಧ 2011ರಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಹಾಗೂ 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವಾಗಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ 2013ರಲ್ಲಿ ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ದೇವೇಂದ್ರ, ತುಮಕೂರಿನ ಗುಬ್ಬಿ ಮೂಲದ ಮಲ್ಲೇಶ್ ಎಂಬುವವರನ್ನು ಪೊಲೀಸರು ಬಂದಿಸಿದ್ದರು.
ವಿಚಾರಣೆ ಸಂದರ್ಭದಲ್ಲಿ ಅವರು ಕಿಂಗ್ಪಿ ನ್ ಶಿವಕುಮಾರ್ ಎಂಬ ವಿಷಯ ಬೆಳಕಿಗೆ ಬಂದಿತ್ತು. ಹೀಗಾಗಿ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದರು.
ಆನಂತರ ಹೊರಗೆ ಬಂದಿದ್ದ ಈ ವ್ಯಕ್ತಿ 2016ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಹಾಗೂ 2018ರಲ್ಲಿ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ. ಆನಂತರ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, ಈಗ ಈ ವ್ಯಕ್ತಿಯನ್ನು ಮಹಾಮಾರಿ ಬಲಿ ಪಡೆದಿದೆ.