ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಜನಜಾಗೃತಿ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, 1986ರ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ತಿದ್ದುಪಡಿ ಕಾಯ್ದೆ 2016ರ ಪ್ರಕಾರ 14 ವರ್ಷದ ಮೇಲ್ಪಟ್ಟ ಹಾಗೂ 18 ವರ್ಷ ಒಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ಯಮದಲ್ಲಿ ಹಾಗೂ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ನೇಮಿಸಿಕೊಂಡಲ್ಲಿ ಕನಿಷ್ಠ 20000ದಿಂದ ಗರಿಷ್ಠ 50000 ರೂ.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿಗಳಾದ ಶ್ರೀಶೈಲ್ ಸೊಮನಕಟ್ಟಿ, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಂದೇಶ ಪಾಟೀಲ, ಕಾರ್ಮಿಕ ನಿರೀಕ್ಷಕರಾದ ಉಮೇಶ ಹುಲ್ಲಣ್ಣವರ, ಸುಶ್ಮಾ, ಫಕಿರಪ್ಪ ಹಡಗಲಿ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಸದರಿ ವಾಹನವು ಜಿಲ್ಲೆಯಾದ್ಯಂತ 15 ದಿನಗಳವರೆಗೆ ಸಂಚರಿಸಲಿದೆ.