ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಜೂ.24-ಇಂಧನ ಬೆಲೆ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಮೂಲಕ ಗಾಯದ ಮೇಲೆ ಬರೆ ಎಳೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಜೈ ಭೀಮ ಯುವ ಶಕ್ತಿ ಸೇನಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕೋವಿಡ್ ಸಂಕಷ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೇ, ಇಂಧನ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯ ಅಮಾನವೀಯವಾಗಿದೆ. ಈ ನಡೆಯನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಕೋವಿಡ್ ಲಾಕ್ ಡೌನ್ ಕಾರಣಕ್ಕೆ ತಮ್ಮ ಉದ್ಯೋಗ, ಆದಾಯ ಕಳೆದುಕೊಂಡಿರುವ ಜನರಿಗೆ ಜೀವನೋಪಾಯವೇ ಕಷ್ಟವಾದ ಸಮಯದಲ್ಲಿ ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ನಷ್ಟ ಸರಿದೂಗಿಸಲು ಸೋರಿಕೆ, ಭ್ರಷ್ಟಾಚಾರ, ದುಂದುವೆಚ್ಚಗಳನ್ನು ತಡೆಗಟ್ಟುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿತ್ತು. ಕೋವಿಡ್ ಪರಿಹಾರದ ಹೆಸರಿನಲ್ಲಿ ಒಂದು ಕೈಯಲ್ಲಿ ಪುಡಿಗಾಸನ್ನು ನೀಡಿ ಇನ್ನೊಂದು ಕೈಯಲ್ಲಿ ಈ ರೀತಿ ವಿದ್ಯುತ್, ಪೆಟ್ರೋಲ್ ಗಳ ಮೂಲಕ ಸುಲಿಗೆ ಮಾಡುವುದು ಜನಪರ ಸರ್ಕಾರದ ಲಕ್ಷಣವೇ..? ವಿದ್ಯುತ್ ದರ ಏರಿಕೆಯ ಈ ಜನವಿರೋಧಿ ತೀರ್ಮಾನವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕೆಂದು ಒತ್ತಾಯಿಸಿದರು.