ವಿಜಯಸಾಕ್ಷಿ ಸುದ್ದಿ, ಹಾವೇರಿ
ನಿಮ್ಮೆಲ್ಲರ ಸಹಕಾರ, ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಈ ಸ್ಥಾನ ಪಡೆಯಲು ನಿಮ್ಮ ಪಾತ್ರ ಪ್ರಮುಖವಿದೆ. ಈಡಿ ರಾಜ್ಯದ ಜವಾಬ್ದಾರಿ ನನಗಿದೆ. ಆದರೆ ಎಂದೂ ನನ್ನ ತವರು ಮನೆಯನ್ನು ಮರೆಯೋದಿಲ್ಲ.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧನಾಗಿದ್ದೇನೆ. ಕ್ಷೇತ್ರದ ಬಗೆಗಿನ ಕಂಡ ಕನಸುಗಳು ನನಸಾಗುವ ಕಾಲ ಬಂದಿದೆ. ಮಾದರಿ ಕ್ಷೇತ್ರವಾಗಿಸುವ ಕನಸು ನನಸು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಮಾತನಾಡಿದ ಅವರು, ಬರುವ ಶೈಕ್ಷಣಿಕ ವರ್ಷಕ್ಕೆ ಸರಕಾರಿ ಪದವಿ ಕಾಲೇಜು ಆರಂಭಿಸಲಾಗುವುದು. ಇಲ್ಲಿ ಅತಿದೊಡ್ಡ ಗ್ರಾಮ ಪಂಚಾಯತಿ ಇದೆ. ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುತ್ತೇನೆ. ಜಾತಿ ಬೇಧವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ನನ್ನ ಜೊತೆಗೆ ಹಿರಿಯರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬೈರತಿ ಬಸವರಾಜ್ ಬಂದಿದ್ದಾರೆ. ಕ್ಯಾಬಿನೆಟ್‌ನಲ್ಲಿ ಪ್ರತಿಭಾವಂತರಿದ್ದಾರೆ. ನಮ್ಮದು ಒಳ್ಳೆಯ ಟೀಂ ಇದೆ. ಅವರೆಲ್ಲರ ಕಾರ್ಯಕ್ಷಮತೆ ಬಳಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡುತ್ತೇನೆ. ಹೊರಗಡೆ ನಾನು ಮುಖ್ಯಮಂತ್ರಿ ಆಗಿರಬಹುದು, ಇಲ್ಲಿಗೆ ಬಂದಾಗ ನಿಮ್ಮ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.

ರೈತರ ಆದಾಯ ದುಪ್ಪಟ್ಟುಗೊಳಿಸಲು ಯೋಜನೆ
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ರಾಜೀವ ಗ್ರಾಮದ ಬಳಿ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರೈತರ ಆದಾಯ ದುಪ್ಪಟ್ಟುಗೊಳಿಸುವ ಕೆಲಸ ಮಾಡುತ್ತಿದ್ದೇನೆ.
ಭೂಮಿಯ ಪ್ರಮಾಣ ಕಡಿಮೆ ಆಗುತ್ತಿದೆ. ರೈತರ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು. ನಾನು ಸಿಎಂ ಆಗುತ್ತಿದ್ದಂತೆ ರೈತರ ಮಕ್ಕಳಿಗೆ ಶಿಷ್ಯವೇತನ ಕೊಡುವ ನಿರ್ಧಾರ ಮಾಡಿದೆ. ಇಡೀ ದೇಶದಲ್ಲಿ ಇಂಥ ಯೋಜನೆ ಇರುವುದು ಕರ್ನಾಟಕದಲ್ಲಿ ಮಾತ್ರ.
ರೈತರಿಗೆ ಬೇರೆ ಬೇರೆ ರೀತಿಯ ತರಬೇತಿ ಕೊಟ್ಟು ಅವರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ನೌಕರಿ ಮಾಡೋರಿಗೆ ಮಾತ್ರ ಆರ್‌ಸಿಸಿ ಮನೆಗಳು ಇವೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ.
ಅಧಿಕಾರಿಗಳು ಬಹಳ ದುಡ್ಡು ಆಗುತ್ತದೆ ಎಂದರು. ಅದು ಬಡವರ ದುಡ್ಡು, ಅವರಿಗೆ ಕೊಡಲು ನಿಮಗೇನು ಕಷ್ಟ ಎಂದು ಕೇಳಿದೆ. ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು.
ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ಸರಕಾರಗಳು ಶ್ರೀಮಂತ ಆಗುತ್ತವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನು ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಮುಂಬರುವ ದಿನಗಳಲ್ಲಿ ಮಾಡಿಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.