ಫೆ.21ರಂದು ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾವೇಶ:
ಜಿಲ್ಲೆಯಿಂದ ಸುಮಾರು 30,000 ಜನರು ಭಾಗಿ
ವಿಜಯಸಾಕ್ಷಿ ಸುದ್ದಿ, ಗದಗ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಈಗಾಗಲೇ ಪಾದಯಾತ್ರೆ ನಡೆಯುತ್ತಿದ್ದು, ಫೆ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯಿಂದ ಸುಮಾರು 30 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೂಡಲಸಂಗಮದಿಂದ ಬಸವಜಯ ಮೃತ್ಯುಂಜಯ ಶ್ರೀಗಳು ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಹರಿಹರ ಗುರುಪೀಠದ ವಚನಾನಂದ ಶ್ರೀಗಳು ಸಾಥ್ ಕೊಟ್ಟಿದ್ದಾರೆ. ಈಗಾಗಲೇ ಪಾದಯಾತ್ರೆ ಬೆಂಗಳೂರು ಸಮೀಪಿಸಿದ್ದು, ಫೆ.21 ರಂದು 2ಎ ಮೀಸಲಾತಿ ಕಲ್ಪಿಸಿ ಪಂಚಮಸಾಲಿ ಸಮಾಜಕ್ಕೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಶಕ್ತಿ ತುಂಬುವಂತೆ ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಉಭಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಸಭೆ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾವೇಶಕ್ಕೆ ರಾಜ್ಯಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಪಂಚಮಸಾಲಿ ಸಮಾಜದ ಜನರು ಆಗಮಿಸಲಿದ್ದು, ಜಿಲ್ಲೆಯಿಂದ ಜನರನ್ನು ಕರೆದುಕೊಂಡು ಹೋಗಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘದಿಂದ ಬೆಟಗೇರಿಯಿಂದ 5 ಬಸ್, 25 ಕ್ರಶರ್‌ಗಳ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಜಿಲ್ಲೆಯ ಲಕ್ಷ್ಮೇಶ್ವರ, ಗಜೇಂದ್ರಗಡ, ಶಿರಹಟ್ಟಿ, ರೋಣ ಸೇರಿದಂತೆ ವಿವಿಧ ಭಾಗಗಳಿಂದ ಜನರು ಸಮಾವೇಶಕ್ಕೆ ಹೋಗಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮೋಹನ್ ಮಾಳಶೆಟ್ಟಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅನೀಲ್ ಪಾಟೀಲ್, ಸಿದ್ದು ಪಲ್ಲೇದ, ಅಯ್ಯಪ್ಪ ಅಂಗಡಿ, ಮಲ್ಲಿಕಾರ್ಜುನ ಹಿರೇಕೊಪ್ಪ, ಮಹೇಶ್, ಶಿವನಗೌಡ ಇದ್ದರು.