ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮರೆಯದೆ, ಚುನಾವಣಾ ಆಯೋಗದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಚುನಾವಣಾ ಕಾರ್ಯಗಳಲ್ಲಿ ಅನನುಕೂಲ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ವೀಕ್ಷಕಿ ಡಾ. ಶಾಲಿನಿ ರಜನೀಶ್ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ನಡೆದ ಮೈಕ್ರೋ ವೀಕ್ಷಕರ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪಶ್ಚಿಮ ಪದವೀಧರ ಚುನಾವಣೆಯ ಅಂತ್ಯದವರೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಆಗದಂತೆ ನಿಗಾವಹಿಸಬೇಕು. ಎಂಸಿಸಿ ಉಲ್ಲಂಘನೆಯಾದಲ್ಲಿ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಾಗುವುದು. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.
ಚುನಾವಣೆ ಕಾರ್ಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಸಂಬಂಧಿಸಿದ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಚುನಾವಣಾ ಕಾರ್ಯದ ಪ್ರತಿ ಹಂತದ ಪ್ರಚಲಿತ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ವಾಟ್ಸಾಪ್ ಗ್ರೂಪ್ ಮಾಡುವ ಮೂಲಕ ವಿನಿಮಯ ಮಾಡಿಕೊಳ್ಳಬೇಕು. ಚುನಾವಣಾ ಆಯೋಗ ಕಾಲಕಾಲಕ್ಕೆ ನೀಡುವ ನಿರ್ದೇಶನಗಳಂತೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಮುಂಜಾಗ್ರತೆ ಇರಲಿ: ಕೊರೊನಾ ಸಂದರ್ಭದಲ್ಲಿ ನಡೆಯುತ್ತಿರುವ ಪ್ರಥಮ ಚುನಾವಣೆ ಇದಾಗಿದ್ದು, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್ ಬಗ್ಗೆ ಭಯಪಡದೆ ಜಾಗೃತವಾಗಿರಬೇಕು. ಮತದಾನದ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಚುನಾವಣಾ ಸಿಬ್ಬಂದಿ, ಮತದಾರರು ಸಹಿತ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತದಾನಕ್ಕೂ ಮುನ್ನ ಮತಗಟ್ಟೆಗಳನ್ನು ಸ್ಯಾನಿಟೈಜೇಶನ್ ಮಾಡಬೇಕು., ಮತದಾನದ ಕೊನೆಯ ಘಳಿಗೆಯಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಕೋವಿಡ್ ಸೋಂಕಿತ ಮತ್ತು ಶಂಕಿತ ಪದವೀಧರರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಿ ಕೊಡಬೇಕು. ಮತಗಟ್ಟೆಗಳಲ್ಲಿ ಪ್ರತಿಯೊಬ್ಬರೂ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನಿರ್ದೇಶಿಸಿದರು.
ಮತಗಟ್ಟೆಯಲ್ಲಿ ಶಾಂತಿಯುತ ಹಾಗೂ ನಿಷ್ಪಕ್ಷಪಾತ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಜನಸಂದಣಿ ಆಗದಂತೆ ಕ್ರಮ ಕೈಗೊಳ್ಳಬೇಕು. ಮತದಾನ ಕೇಂದ್ರಗಳಲ್ಲಿ ವ್ಯಕ್ತಿಗತ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ನಿಯಂತ್ರಿಸುವುದರ ಜೊತೆಗೆ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಡಾ. ಶಾಲಿನಿ ರಜನೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು, ಜಿ.ಪಂ. ಸಿಇಒ ಡಾ. ಆನಂದ ಕೆ., ಎಸ್ಪಿ ಯತೀಶ್ ಎನ್., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೈಕ್ರೋ ವೀಕ್ಷಕರ ಪ್ರಾತ್ಯಕ್ಷಿಕೆ ತರಬೇತಿ
Advertisement