ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ನಿನ್ನೆ ತಡರಾತ್ರಿ ನಿವಾರ್ ಚಂಡಮಾರುತ ಅಪ್ಪಳಿಸಿದೆ. ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾಗಿ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು ಮತ್ತು ಸುತ್ತಲಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ತುಮಕೂರು ಹಾಗೂ ರಾಮನಗರ ಸೇರಿದಂತೆ 7 ಜಿಲ್ಲೆಗಳಲ್ಲಿಂದು ಹಳದಿ ಅಲರ್ಟ್ ಘೋಷಿಸಿದೆ.
ನಿನ್ನೆಯಿಂದ ತಮಿಳುನಾಡು, ಪುದುಚೇರಿಯಲ್ಲಿ ನಿವಾರ್ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಹಾಗಾಗಿ ನೆರೆಯ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ ರಾಜ್ಯಗಳ ಮೇಲೂ ನಿವಾರ್ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ರಣಭೀಕರ ನಿವಾರ್ ಚಂಡಮಾರುತದಿಂದಾಗಿ ಚೆನ್ನೈಗೆ ತೆರಳುವ ಹಲವು ಬಸ್ , ವಿಮಾನಗಳ ಸಂಚಾರ ನಿಲ್ಲಿಸಲಾಗಿದೆ. ಸರ್ಕಾರಿ ರಜೆ ಘೋಷಿಸಲಾಗಿದ್ದು, ತಮಿಳುನಾಡು ಮತ್ತು ಪುದಿಚೇರಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.