ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿನ ಆರ್ಭಟ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ಜೂ. 7ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಆ ನಂತರವೂ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ಚರ್ಚೆಗಳು ರಾಜ್ಯ ಸರ್ಕಾರದಲ್ಲಿ ನಡೆಯುತ್ತಿವೆ. ಇಂದು ಸರ್ಕಾರ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ಲಾಕ್ ಡೌನ್ ಕುರಿತು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಇಂದು ಉನ್ನತ ಮಟ್ಟದ ತಜ್ಞರ ಜೊತೆ ಲಾಕ್ ಡೌನ್ ಕುರಿತು ಸಿಎಂ ಅವರು ತಮ್ಮ ಕೃಷ್ಣಾ ನಿವಾಸದಲ್ಲಿ ಸಂಜೆ 4.30ಕ್ಕೆ ಸಭೆ ನಡೆಸಲಿದ್ದಾರೆ. ಆ ನಂತರ ಸಂಜೆ 6ಕ್ಕೆ ಕೊರೊನಾ ತಜ್ಞರು ನೀಡಿರುವ ವರದಿ ಕುರಿತು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವರು ಪ್ರಮುಖ ಸಚಿವರು ಜೂ. 7ರ ನಂತರವೂ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಒಲವು ತೋರಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ ಅವರು ಜೂ. 7ರ ನಂತರ ಹಂತ ಹಂತವಾಗಿ ಅನ್ ಲಾಕ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ತಜ್ಞರ ವರದಿಯೊಂದಿಗೆ ಸಚಿವರ ಅಭಿಪ್ರಾಯಗಳ ಕುರಿತು ಸಂಜೆ ಚರ್ಚೆಯಾಗಲಿದೆ. ಈ ಸಂದರ್ಭದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಬೇಕಾ? ಬೇಡವಾ? ಎಂಬುವುದನ್ನು ನಿರ್ಧರಿಸುವ ಸಾಧ್ಯತೆ ಇದೆ.
ತಜ್ಞರು, ಕೊರೊನಾ ಸೋಂಕನ್ನು ನಿಯಂತ್ರಿಸಲು ಇವರು ಏಕೈಕ ಮಾರ್ಗ ಲಾಕ್ ಡೌನ್ ಮಾತ್ರ. ಹೀಗಾಗಿ ಲಾಕ್ಡೌನ್ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಅಲ್ಲದೆ, ಜೂನ್ ಕೊನೆಯವರೆಗೆ ಲಾಕ್ ಡೌನ್ ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆಯೇ ದಟ್ಟವಾಗಿದೆ.
ಈಗಾಗಲೇ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಜೂ. 7ರ ನಂತರ ಲಾಕ್ ಡೌನ್ ಸಡಿಲಿಕೆ ಮಾಡಿ, ಹಂತ ಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬೇಕು ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನೂ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆಯ ಕುರಿತು ಸಲಹೆ ನೀಡಿದ್ದಾರೆ. ಹೀಗಾಗಿ ಇಂದಿನ ಸಭೆಯಲ್ಲಿ ಲಾಕ್ ಡೌನ್ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಬಹುದು ಎನ್ನಲಾಗುತ್ತಿದೆ.