ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸದೊಂದಿಗೆ ವರುಣನ ಆರ್ಭಟವೂ ಹೆಚ್ಚಾಗುತ್ತಿದೆ. ತೌಕ್ತೆ ಚಂಡಮಾರುತದ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಳೆ ಹೆಚ್ಚಾಗಿ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳ ಜನರು ಎರಡು ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಠಿಸಿದೆ. ಈಗಾಗಲೇ ಕೇರಳದಲ್ಲಿ ಭರ್ಜರಿ ಮಳೆಯಾಗುತ್ತಿದೆ. ತಿರುನಂತಪುರಂ, ವಯನಾಡು, ಕೊಯಿಕ್ಕೋಡ್, ಕಾಸರಗೋಡು ಸೇರಿದಂತೆ ಆ ರಾಜ್ಯದ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಪ್ರವಾಹ ಕೂಡ ಉಂಟಾಗಿದೆ. ಸಮುದ್ರದಲ್ಲಿ ಅಲೆಗಳು ಜೋರಾಗಿ ಅಪ್ಪಳಿಸುತ್ತಿವೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ದಟ್ಟವಾಗಿದೆ. ಈ ಚಂಡಮಾರುತದ ಎಫೆಕ್ಟ್ ಈಗಾಗಲೇ ಕರಾವಳಿ ಭಾಗದಲ್ಲಿಯೂ ತೋರಿಸುತ್ತಿದೆ. ಅಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.