ರೈತರಿಗೆ ಬೆಳೆ ವಿಮೆ ಪಾವತಿಗೆ ಸಹಕರಿಸಿ; ಜಿಲ್ಲಾಧಿಕಾರಿ ಸೂಚನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮಾ ಪಾವತಿಸುವ ರೈತರಿಗೆ ಬೆಳೆ ವಿಮೆ ಕಂತು ಪಾವತಿಸಲು ಸಮರ್ಪಕ ಮಾಹಿತಿ ಒದಗಿಸುವುದರೊಂದಿಗೆ ವಿಮೆ ಮೊತ್ತ ಪಾವತಿಗೆ ಕೃಷಿ ಇಲಾಖೆ ಹಾಗೂ ಬ್ಯಾಂಕ್ ಅಧಿಕಾರಿಗಳು ಸೂಕ್ತ ಸಹಕಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯಲ್ಲಿ ಮುಂಗಾರು 2021 ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬೀಮಾ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರನ್ನು ನೋಂದಣಿ ಮಾಡುವಲ್ಲಿ ಕಡ್ಡಾಯವಾಗಿ ರೈತರಿಂದ ಲಿಖಿತ ರೂಪದಲ್ಲಿ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಬೇಕು. ಈ ಯೋಜನೆಯಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದೊಂದಿಗೆ ತಾಳೆ ಮಾಡಿ, ಬಿತ್ತಿದ ಬೆಳೆಯನ್ನು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಬೇಕು ಹಾಗೂ ಇದರ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದರು.

ಯಾವುದೇ ಕಾರಣಕ್ಕೂ ರೈತರಿಂದ ನಿಗದಿಗಿಂತ ಹೆಚ್ಚಿನ ದರವನ್ನು ಸಾರ್ವಜನಿಕ ಸೇವಾ ಕೇಂದ್ರದವರು ಪಡೆದುಕೊಳ್ಳಬಾರದು. ರೈತರು ಸಲ್ಲಿಸಿದ ಅರ್ಜಿಗಳನ್ನು ಕೊನೆಯ ದಿನಾಂಕದವರೆಗೆ ಕಾಯದೆ ಅವರು ಅರ್ಜಿ ಸಲ್ಲಿಸಿದ ದಿನವೇ ತಂತ್ರಾಂಶದಲ್ಲಿ ಅಳವಡಿಸಲು ಮುಂದಾಗಬೇಕು. ಜಿಲ್ಲೆಯ ರೈತರಿಗೆ ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ವಿತರಣೆಯಾಗದಂತೆ ಕ್ರಮ ವಹಿಸಬೇಕು. ಈ ಕುರಿತು ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ಕಾಲ ಕಾಲಕ್ಕೆ ತಪಾಸಣೆ ನಡೆಸಿ ಹೆಚ್ಚಿನ ದರಕ್ಕೆ ಬಿತ್ತನೆ ಬೀಜ ಮಾರಾಟ ಮಾಡುವವರ ಹಾಗೂ ಕಳಪೆ ಬಿತ್ತನೆ ಬೀಜ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ನೂಕುನುಗ್ಗಲು ತಪ್ಪಿಸಿ

ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ನೂಕುನುಗ್ಗಲು ಆಗದಂತೆ ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ಜಿಲ್ಲೆಯ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ವಿತರಣೆಯಾಗುವಂತೆ ಸೂಕ್ತ ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.

ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟನಾಶಕಗಳ ದಾಸ್ತಾನು ವಿವರಗಳನ್ನು ಪ್ರರ್ದಶಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಮಾತನಾಡಿ, ಪ್ರಸಕ್ತ ಸಾಲು ಮತ್ತು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ / ಪಡೆಯದ ರೈತರು ಸದರಿ ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಶೀದಿ ಮತ್ತು ಆಧಾರ್ ಸಂಖ್ಯೆ ನೀಡಬೇಕು. ಬ್ಯಾಂಕನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಲ್ಲಿ ಒಳಪಡಿಸಲಾಗುವುದು. ರೈತರು ಬೆಳೆ ವಿಮೆಯಡಿ ನೋಂದಾಯಿಸಲು ಕೊನೆಯ ದಿನಾಂಕ ಹೆಸರು (ಮಳೆ ಆಶ್ರಿತ) ಬೆಳೆಗೆ ಜುಲೈ. 15, ಇನ್ನುಳಿದ ಬೆಳೆಗೆ ಜು.31 ಆಗಿದ್ದು, ಸೂರ್ಯಕಾಂತಿ (ನೀರಾವರಿ, ಮಳೆ ಆಶ್ರಿತ) ಬೆಳೆಗಳಿಗೆ ಆಗಸ್ಟ್. 16 ಆಗಿರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ, ಅಂಕಿ ಸಂಖ್ಯಾ ಅಧಿಕಾರಿಗಳು, ವಿಮಾ ಕಂಪನಿ ಅಧಿಕಾಗಿಗಳು, ವಿವಿಧ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here