ವಿಜಯಸಾಕ್ಷಿ ಸುದ್ದಿ, ವಿಜಯಪುರ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿಯ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದಾರೆ. ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನಲ್ಲಿ ತಿಳಿಸಿದ್ದಾರೆ.
ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸಿಡಿ ಯುವತಿಯ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಆ ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಹೀಗಾಗಿ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ.
ಮೇ. 21ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೊಟೀಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯ್ ಕುಮಾರ್ ಅವರು ಯುವತಿ ಕುಟುಂಬಸ್ಥರಿಗೆ ನೀಡಿದ್ದಾರೆ. ಲಾಕ್ ಡೌನ್ ನಂತರ ವಿಚಾರಣೆಗೆ ಹಾಜರಾಗಬೇಕೆಂದು ನೊಟೀಸ್ ನಲ್ಲಿ ಸೂಚಿಸಲಾಗಿದೆ.
ಇತ್ತೀಚೆಗಷ್ಟೇ ರಮೇಶ್ ಜಾರಕಿಹೊಳಿ ಅವರು ಸಿಡಿಯಲ್ಲಿರುವವನು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.