ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಆಂತರಿಕ ಕಚ್ಚಾಟದಿಂದ ಜನ ಬೇಸತ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬುದು ಜನರ ದನಿಯಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಕೊಪ್ಪಳದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದರೆ ಇಂಥ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರು ಎಂಬುದು ಜನಾಭಿಪ್ರಾಯವಾಗಿದೆ. ಅದನ್ನೇ ನಮ್ಮ ಪಕ್ಷದ ಮುಖಂಡರು ಹೇಳುತ್ತಿದ್ದಾರೆ ಎಂದರು.
ಕೊರೊನಾ ದಿನಗಳಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ. ಅನೇಕರು ಉದ್ಯೋಗ ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಂಥವರ ಕಷ್ಟಗಳಿಗೆ ಹೆಗಲು ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜೂನ್ 21ರ ಸೋಮವಾರ ಕೊಪ್ಪಳದಲ್ಲಿ 15 ಸಾವಿರ ಆಹಾರ ಕಿಟ್‌ಗಳನ್ನು ವಿತರಿಸಲಾಗುತ್ತದೆ. ತಾಲೂಕು ಕ್ರೀಡಾಂಗಣದಲ್ಲಿ ಸಾಂಕೇತಿಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರು ಆಹಾರ ಕಿಟ್‌ಗಳನ್ನು ಕೆಲ ಅರ್ಹ ಕುಟುಂಬಗಳಿಗೆ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಮ್ಜದ್ ಪಟೇಲ್, ಗುರು ಹಲಗೇರಿ, ಮುತ್ತುರಾಜ, ಮುಖಂಡ ರವಿ ಕುರಗೋಡ ಮತ್ತಿತರರು ಇದ್ದರು.