ವಿಜಯಸಾಕ್ಷಿ ಸುದ್ದಿ, ಗದಗ
ರಾಜ್ಯ ಸರ್ಕಾರ ಪ್ರಸ್ತುತ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ವೈದ್ಯಕೀಯ ಪರಿಣಿತರು ನೀಡಿರುವ ಸಲಹೆ ಮೇರೆಗೆ ಕಣ್ಗಾವಲು ನಿಯಂತ್ರಣ ಮತ್ತು ಜಾಗೃತಿ ಮಾರ್ಗಸೂಚಿಗಳನ್ನು ಸೆ.13 ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರೆಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯ, ಕಾನೂನು ಸುವ್ಯವಸ್ಥೆ ಕಾಪಾಡಲು ಕೋವಿಡ್-19 ಮಾರ್ಗಸೂಚಿಗಳನ್ವಯ ಜು.13 ರಿಂದ ಆ.30 ವರೆಗೆ ಇದ್ದ ಪ್ರತಿಬಂಧಕಾಜ್ಞೆಯನ್ನು ಸೆ.13 ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಆ.31 ರಿಂದ ಸೆ.13 ವರೆಗೆ ಪ್ರತಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಮುಖಗವಸು ಧರಿಸುವುದು, ದೈಹಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಸಾರ್ವಜನಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ನಗರ ಪಾಲಿಕೆ ಪ್ರದೇಶಗಳಲ್ಲಿ 250.ರೂ ಮತ್ತು ಇನ್ನಿತರ ಪ್ರದೇಶಗಳಲ್ಲಿ 100.ರೂ ದಂಡವನ್ನು ವಿಧಿಸುವುದರ ಜೊತೆಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.