ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ. ಆರಂಭದಲ್ಲಿ ಸರ್ಕಾರ ಕರ್ಫ್ಯೂ ಜಾರಿಗೊಳಿಸಿತ್ತು. ಇದಕ್ಕೆ ಕೊರೊನಾ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿತ್ತು. ಆದರೂ ಮಹಾಮಾರಿ ಹತೋಟಿಗೆ ಬರುತ್ತಿಲ್ಲ. ಹೀಗಾಗಿ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ ಎನ್ನಲಾಗುತ್ತಿದೆ.
ಸಿಎಂ ಯಡಿಯೂರಪ್ಪ ಅವರು ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಏಕೆಂದರೆ ಸಿಎಂ ಅವರು ಇಂದು ಬೆಳಿಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಭೆಯಲ್ಲಿ ಲಾಕ್ ಡೌನ್ ವಿಷಯದ ಬಗ್ಗೆಯೇ ಅವರು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯದ ಸ್ಥಿತಿಯಲ್ಲಂತೂ ಕೊರೊನಾ ಹತೋಟಿಗೆ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಅನಿವಾರ್ಯ. ಆದರೆ, ಲಾಕ್ ಡೌನ್ ಅನ್ನು ಎಷ್ಟು ದಿನಗಳಿಗೆ ವಿಸ್ತರಿಸುತ್ತಾರೆ ಎಂಬುವುದು ಮಾತ್ರ ಇನ್ನೂ ತಿಳಿದು ಬಂದಿಲ್ಲ. ಇನ್ನೂ 14 ದಿನಗಳ ಕಾಲವಾದರೂ ಕಠಿಣ ಲಾಕ್ ಡೌನ್ ಬೇಕು ಎಂದು ತಜ್ಞರು ಈಗಾಗಲೇ ಸಿಎಂ ಅವರಿಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ.
ಲಾಕ್ ಡೌನ್ ಮುಂದುವರೆಸಲು ಸಂಪುಟದ ಸಚಿವರು ಕೂಡ ಬೆಂಬಲ ಸೂಚಿಸಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಲಾಕ್ ಡೌನ್ ಅನಿವಾರ್ಯ ಎಂದು ಸಿಎಂ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇರುವುದರಿಂದಾಗಿ ವಿಶೇಷ ಪ್ಯಾಕೇಜ್ ಘೋಷಣೆಯಾಗಬಹುದು ಎನ್ನಲಾಗುತ್ತಿದೆ. ರೂ. 500 ಕೋಟಿ ಮೌಲ್ಯದ ವಿಶೇಷ ಪ್ಯಾಕೇಜ್ ನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡುವ ಸಾಧ್ಯತೆ ಇದೆ. ನಿನ್ನೆ ಸಿಎಂ ಯಡಿಯೂರಪ್ಪ ಅವರು ಹಣಕಾಸು ಇಲಾಖೆಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿದ್ದಾರೆ. ಹೀಗಾಗಿಯೇ ಬಡವರಿಗೆ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿರೋಧ ಪಕ್ಷದ ನಾಯಕರು ಕೂಡ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಸರ್ಕಾರಕ್ಕೆ ಸಲಹೆ – ಸೂಚನೆ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಲಾಕ್ ಡೌನ್ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಒಂದು ತಿಂಗಳು ಕಾಲ ಲಾಕ್ ಡೌನ್ ಜಾರಿ ಮಾಡಿ ಎಂದು ಹೇಳಿದ್ದಾರೆ.