ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದ್ದರೂ, ಇದುವರೆಗೆ ಯಾರೊಬ್ಬರ ಮೇಲೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಕೈಗೊಳ್ಳಲಾದ ಪೊಲೀಸ್ ಕ್ರಮವನ್ನು ಖಂಡಿಸಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
“ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ದಾರೆ? ನ್ಯಾಯಸಮ್ಮತ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಯನ್ನು ಕೇಳುತ್ತಿರುವ ಅವರ ವಿರುದ್ಧ ಭದ್ರತಾ ಪಡೆಗಳು ಬಲಪ್ರಯೋಗ ನಡೆಸುವುದು ಏಕೆ? ಗುಣಮಟ್ಟದ ಮತ್ತು ವಿಶ್ವಾಸಾರ್ಹ ಶಿಕ್ಷಣ ವ್ಯವಸ್ಥೆ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು” ಎಂದು ಅವರು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಶ್ರಮಿಸುತ್ತಾರೆ. ಆದರೆ ಪರೀಕ್ಷೆಯ ಅಂತಿಮ ಹಂತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸುದ್ದಿ ಹೊರಬೀಳುವುದರಿಂದ ಅವರ ಕನಸುಗಳು ಭಗ್ನವಾಗುತ್ತಿವೆ. ಈ ರೀತಿಯ ನಿರಂತರ ಅಕ್ರಮಗಳಿಂದ ಅನೇಕ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಮುಂದಿಟ್ಟ ಮೂರು ಪ್ರಮುಖ ಬೇಡಿಕೆಗಳು
- ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
- ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.
- ದೇಶಾದ್ಯಂತ ನಡೆದ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ಅನುಭವಿಸಿದ ಸಂಕಷ್ಟಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಬೇಕು.
ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸ ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣ ಪರಿಣಾಮಕಾರಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.



