ಬೆಂಗಳೂರು: ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್ನಲ್ಲಿ ಎರಡು ವರ್ಷದ ಹೆಣ್ಣು ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ ಮಗುವಿನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಎಂಬವರು ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಇವರಿಗೆ ಎರಡು ವರ್ಷದ ಹೆಣ್ಣು ಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಮಗು ಮೃತಪಟ್ಟಿದೆ ಎಂದು ಪೋಷಕರು ಹೇಳಿಕೆ ನೀಡಿದ್ದಾರೆ.
ಘಟನೆಯ ಮಾಹಿತಿ ಪಡೆದ ಬಾಣಸವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ದಂಪತಿಯ ಸ್ನೇಹಿತೆಯೊಬ್ಬರು ಮಗುವಿನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ, ತಾಯಿ ಮಗುವಿಗೆ ಆಗಾಗ ಹೊಡೆಯುತ್ತಿದ್ದುದನ್ನು ತಾನು ನೋಡಿದ್ದೇನೆ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಮಗುವಿನ ದೇಹದ ಮೇಲೆ ಕೆಲವೆಡೆ ಗಾಯದ ಗುರುತುಗಳು ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಪ್ರಕರಣದ ಕುರಿತು ಪೊಲೀಸರು ಪೋಷಕರು ಸೇರಿದಂತೆ ಸಂಬಂಧಪಟ್ಟವರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.



